ರಾಯಚೂರು: ಸರ್ಕಾರಿ ಶಾಲಾ, ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿ ಸರ್ಕಾರ ತೆಗೆದುಕೊಳ್ಳಬೇಕೆ ಹೊರತು ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತವಾಗಬಾರದು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ (ಎಐಡಿಎಸ್ಒ) ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದರು.
ಎಐಡಿಎಸ್ಒ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರ ವಿದ್ಯಾರ್ಥಿಗಳ ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲಿನಗೊಳಿಸುವುದು ಹಾಗೂ ಮುಚ್ಚುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.
‘ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೊರೇಟ್ ಕಂಪನಿಗಳ ಬಳಿ ಧನ ಸಹಾಯ ಪಡೆಯುವ ಬದಲು, ಜನಗಳಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ಸರ್ಕಾರವೇ ನೀಡಬೇಕು. ಈ ಹಿಂದೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬಡ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರದಿಂದ ಎನ್.ಇ.ಪಿ 2020 ಜಾರಿಗೊಳಿಸಲಾಗಿತ್ತು. ವಿದ್ಯಾರ್ಥಿಗಳ ನಿರಂತರ ಹೋರಾಟದಿಂದ ಅದನ್ನು ಕೈಬಿಡಲಾಯಿತು’ ಎಂದು ತಿಳಿಸಿದರು.
‘ದೇಶದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿ ಹದಗೆಟ್ಟಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ಸಿಗಬೇಕಾರೆ ಸರ್ಕಾರದ ಆದ್ಯತೆ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಳಪಡಿಸುವ ಕಾರ್ಯ ತುರ್ತಾಗಿ ಆಗಬೇಕು. ವಿದೇಶಿ ನೇರ ಬಂಡವಾಳ ಹೂಡಿಕೆ ಹೆಸರಿನಲ್ಲಿ ವಿದೇಶಿ ವಿಶ್ವ ವಿದ್ಯಾಲಯಗಳನ್ನು ತೆರೆಯಲು ಅವಕಾಶ ಕೊಡಬಾರದು. ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡುವಾಗ ಮೌಲ್ಯಗಳನ್ನು ಕಡೆಗಣಿಸಬಾರದು. ಈ ಅಂಶಗಳನ್ನು ಗಮನಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಬೇಕು’ ಎಂದು ಅಗ್ರಹಿಸಿದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಕನ್ನಡ ಭವನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ ಚಾಲನೆ ನೀಡಿದ್ದರು.
ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷ ಹಯ್ಯಳಪ್ಪ, ಕಾರ್ಯದರ್ಶಿ ಪೀರ್ ಸಾಬ್, ಜಿಲ್ಲಾ ಸಮಿತಿ ಸದಸ್ಯರಾದ ಹೇಮಂತ್, ಬಸವರಾಜ, ಅಮೋಘ, ವೀರೇಶ ಉಪಸ್ಥಿತರಿದ್ದರು. ರಾಜ್ಯ ಖಜಾಂಚಿ ಅಭಯ ದಿವಾಕರ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.