ರಾಯಚೂರು: ‘ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ತೀವ್ರಗತಿಯಲ್ಲಿ ನಡೆಸಬೇಕು’ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಆಗ್ರಹಿಸಿದರು.
‘ರಾಜ್ಯ ಸರ್ಕಾರ ಆರಂಭದಲ್ಲೇ ಸುಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಹಾಸನದಿಂದ ಬೆಂಗಳೂರಿಗೆ ಹೋಗುವಾಗಲೇ ಚೆಕ್‌ಪೋಸ್ಟ್ ಹಾಕಿ ಅವರನ್ನು ವಶಕ್ಕೆ ತೆಗೆದುಕೊಳ್ಳಬಹುದಿತ್ತು. ಈ ಮಾತನ್ನು ಅಮಿತ್ ಶಾ ಕೂಡ ಹೇಳಿದ್ದಾರೆ’ ಎಂದು ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
‘ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಪ್ರಜ್ವಲ್ ಅವರನ್ನು ಅಮಾನತು ಮಾಡಿದ್ದಾರೆ. ನಾವು ಮಾತನಾಡುವುದರಿಂದ ಮಹಿಳೆಯರಿಗೆ ನ್ಯಾಯ ಸಿಗುವುದಿಲ್ಲ. ಎಸ್‌ಐಟಿ ಗಂಭೀರವಾಗಿ ತನಿಖೆ ನಡೆಸಬೇಕು. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಆಗಬೇಕು’ ಎಂದು ಹೇಳಿದರು.
‘ಜನ ಎಲ್ಲವನ್ನೂ ನೋಡುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೂ ಪ್ರಜ್ವಲ್ ಪ್ರಕರಣಕ್ಕೂ ಏನು ಸಂಬಂಧ?. ಎಲ್ಲ ಸಂಸತ್ ಸದಸ್ಯರಿಗೆ ಡಿಪ್ಲೋಮೆಟಿಕ್ ಪಾಸ್ ಇದೆ. ಡಿಕೆಶಿ ಹಾಗೂ ಡಿಕೆ ಸುರೇಶಗೂ ಡಿಪ್ಲೋಮೆಟಿಕ್ ಪಾಸ್ ಇದೆ’ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
‘ಜೆಡಿಎಸ್ ಹಾಗೂ ಬಿಜೆಪಿ ಬೇರೆ ಬೇರೆ ಪಕ್ಷಗಳು. ಲೋಕಸಭಾ ಚುನಾವಣೆಯಲ್ಲಿ ಮ್ರೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್ ಬಳಿ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ಬಿಜೆಪಿ ವಿರುದ್ಧ ಮಾತನಾಡುತ್ತಿದೆ’ ಎಂದು ತಿಳಿಸಿದರು.
‘ಕಾಂಗ್ರೆಸ್ ಪಕ್ಷಕ್ಕೆ 50ಕ್ಕಿಂತ ಹೆಚ್ಚಿನ ಸ್ಥಾನಗಳು ಬರುವುದಿಲ್ಲ. ರಾಹುಲ್ ಗಾಂಧಿ ಅವರು ಕೊನೆಯ ಕ್ಷಣದಲ್ಲಿ ರಾಯಬರೇಲಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಮೂರು ಬಾರಿ ಅಮೇಥಿಯಲ್ಲಿ ಗೆಲುವು ಸಾಧಿಸಿದವರು ಕ್ಷೇತ್ರ ಬದಲಾವಣೆ ಮಾಡಿದ್ದಾರೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.