ADVERTISEMENT

ರಾಯಚೂರು, ಯಾದಗಿರಿಯನ್ನು ಮಾದರಿ ಜಿಲ್ಲೆಗಳನ್ನಾಗಿಸುವೆ

ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರ ನಾಯಕ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 15:46 IST
Last Updated 13 ಏಪ್ರಿಲ್ 2024, 15:46 IST
ದೇವದುರ್ಗ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿ.ಕುಮಾರ ನಾಯಕ ಮಾತನಾಡಿದರು
ದೇವದುರ್ಗ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿ.ಕುಮಾರ ನಾಯಕ ಮಾತನಾಡಿದರು   

ದೇವದುರ್ಗ: ‘ಭಾರತೀಯ ಆಡಳಿತ ಸೇವೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ ನನಗೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಅನುಭವಕ್ಕೆ ಮತ ನೀಡಿ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಹತ್ವಾಕಾಂಕ್ಷಿ ಜಿಲ್ಲೆಗಳಿಂದ ದೇಶದ ಮಾದರಿ ಜಿಲ್ಲೆಗಳನ್ನಾಗಿ ಮಾಡುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರ ನಾಯಕ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಬಿ.ಎಚ್.ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಧಿಕಾರಿಯಾಗಿದ್ದ ವೇಳೆ ಅಂದಿನ ಕಾಂಗ್ರೆಸ್ ಸರ್ಕಾರ ಅರಕೇರಾ ಪಟ್ಟಣದಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ ನೀಡಿತ್ತು. ಆ ಯೋಜನೆ ಭಾರತದ ಎಲ್ಲಾ ರಾಜ್ಯಗಳಿಗೆ ಮಾದರಿಯಾಗಿ ಬಡವರ ಮಕ್ಕಳ ಹಸಿವು ನೀಗಿಸಿದೆ. ಬಡತನ, ಶಿಕ್ಷಣ, ಉದ್ಯೋಗ ಮತ್ತು ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಆರೋಗ್ಯಕರ ಚರ್ಚೆಗೆ ಒಳಪಡಿಸಲು ನನಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ ಇಟಗಿ ಮಾತನಾಡಿ,‘ಸುಳ್ಳುಗಳನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಬಡವರ ಬಗ್ಗೆ ಕಾಳಜಿ ಇಲ್ಲ. ಹಸಿದವರಿಗೆ ಅನ್ನ ನೀಡದ, ವೃದ್ಧರಿಗೆ ಪಿಂಚಣಿ, ಅಂಗವಿಕಲರಿಗೆ ಆಸರೆಯಾಗದ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ’ ಎಂದರು.

ಶಾಸಕ ಬಸನಗೌಡ ದದ್ದಲ್ ಮಾತನಾಡಿ,‘ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ, ಸಮಾಜದ ಸಾಮರಸ್ಯ ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ’ ಎಂದು ಮನವಿ ಮಾಡಿದರು.

ಶಾಸಕ ಹಂಪಯ್ಯ ನಾಯಕ ಮಾತನಾಡಿ,‘ಕನ್ನಡಿಗರಿಗೆ ಅಕ್ಕಿ ಇಲ್ಲ ಎಂದು ಮೋದಿ ಭಾರತ ಹೆಸರಿನಲ್ಲಿ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿದ್ದಾರೆ. ದೇಶದ ರಕ್ಷಣೆಗೆ ಮೋದಿ ಮತ್ತೊಮ್ಮೆ ಎನ್ನುವ ಬಿಜೆಪಿಗರು ದೇಶವನ್ನು ಬೇರೆ ದೇಶಕ್ಕೆ ಮಾರಾಟ ಮಾಡಿದ್ದಾರೆ ಏನು?’ ಎಂದು ಪ್ರಶ್ನಿಸಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ ಪೂಜಾರಿ ಸಹೋದರ ಬಸವರಾಜ ಪೂಜಾರಿ ಅವರು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಮಣ್ಣ ಕೆ.ಇರಬಗೇರಾ, ಶಾಂತಪ್ಪ ಹಾಗೂ ಕಾಂಗ್ರೆಸ್ ಮುಖಂಡ ಎ.ರಾಜಶೇಖರ ನಾಯಕ ಮಾತನಾಡಿದರು.

ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ನಿರ್ಮಲ ಬೆಣ್ಣೆ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಅಜೀಜ್, ಆದನೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣ ಜ್ಯೋತಿ ಹಾಗೂ ವಿವಿಧ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.