ರಾಮನಗರ: ಸಣ್ಣ ಮಳೆಗೆ ಕೆರೆ, ಚರಂಡಿಯಂತೆ ಆಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಜನರ ಪಾಲಿಗೆ ಸಾವಿನ ಹೆಮ್ಮಾರಿ ಆಗಿದೆ. ಸರ್ವೀಸ್ ರಸ್ತೆ ಸೇರಿದಂತೆ ಎಲ್ಲ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವವರೆಗೆ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನೂತನ ಹೆದ್ದಾರಿಯಲ್ಲಿ ಭೂಮಿ ಕಳೆದುಕೊಂಡ ಸ್ಥಳೀಯರು ಮುಕ್ತವಾಗಿ ಸಂಚಾರ ಮಾಡಲು ಅವಕಾಶ ಕಲಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಡಬಲ್ ಎಂಜಿನ್ ರಾಜ್ಯ ಬಿಜೆಪಿ, ಕೇಂದ್ರ ಬಿಜೆಪಿ ಸರ್ಕಾರಗಳು ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣಮಳೆಗೇ ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್ ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣಮಳೆಗೆ ಸಾವಿರಾರು ಕೋಟಿ ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನಮಾರಿಯಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ
ವ್ಯಕ್ತಪಡಿಸಿದ್ದಾರೆ.
ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸಿದ ಈ ' ಚುನಾವಣಾ ಗಿಮಕ್ ' ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳಗಿನಜಾವ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ನೀರು ಆಳೆತ್ತರ ನಿಂತಿದೆ. ವಾಹನಗಳು ಅಪಘಾತಕ್ಕೀಡಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. ₹270 ಟೋಲ್ ಕಟ್ಟಿ ಹೆದ್ದಾರಿಗೆ ಬಂದ ವಾಹನ ಸವಾರರು ಮಳೆ ಚಳಿಯಲ್ಲಿ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ನರಳಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿ ಎಂದಿದ್ದಾರೆ ಅವರು.
ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜತೆಗೆ, ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ, ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ? ಎಂದು ಅವರು ಕೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.