ADVERTISEMENT

‘ಬಾಲಕಾರ್ಮಿಕ ಪದ್ಧತಿ ನಿವಾರಣೆಗೆ ಶಿಕ್ಷಣವೇ ಅಸ್ತ್ರ’

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ; ವಿಶೇಷ ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 6:48 IST
Last Updated 13 ಜೂನ್ 2024, 6:48 IST
<div class="paragraphs"><p>ರಾಮನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು&nbsp;ರಿಯ ಸಿವಿಲ್ ನ್ಯಾಯಾಧೀಶೆ ಸವಿತಾ ಪಿ.ಆರ್ ಅವರು, ವಿದ್ಯಾರ್ಥಿನಿಯರೊಂದಿಗೆ ಉದ್ಘಾಟಿಸಿದರು</p></div>

ರಾಮನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ರಿಯ ಸಿವಿಲ್ ನ್ಯಾಯಾಧೀಶೆ ಸವಿತಾ ಪಿ.ಆರ್ ಅವರು, ವಿದ್ಯಾರ್ಥಿನಿಯರೊಂದಿಗೆ ಉದ್ಘಾಟಿಸಿದರು

   

ರಾಮನಗರ: ‘ಸಮಾಜದಲ್ಲಿ ಬೇರು ಬಿಟ್ಟಿರುವ ಹಲವು ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಅಸ್ತ್ರ. ಅದರಂತೆ, ಬಾಲಕಾರ್ಮಿಕ ಪದ್ಧತಿ ನಿವಾರಣೆಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು. ಅರಿವಿನ ಕೊರತೆಯಿಂದಾಗಿಯೇ ಇಂತಹ ಪದ್ಧತಿಗಳು ಇಂದಿಗೂ ಜೀವಂತವಾಗಿವೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

‘ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕುರಿತು ಕೇವಲ ಕಾರ್ಯಕ್ರಮ ಆಯೋಜಿಸಿದರೆ ಸಾಲದು. ಅದನ್ನು ಮೀರಿ ಮಾಡಬೇಕಾದ ಹಲವು ಕೆಲಸಗಳಿವೆ. ವಿವಿಧ ಕಾರಣಗಳಿಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗುತ್ತದೆ’ ಎಂದರು.

‘ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಪ್ರಕಾರ ಅಪರಾಧ. ಇದಕ್ಕಾಗಿ, ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನಿನಡಿ ಶಿಕ್ಷೆ ವಿಧಿಸಲು ಅವಕಾಶವಿದೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ನಿಗಾ ಇಡಬೇಕು’ ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಪ್ರಸನ್ನಕುಮಾರ್ ಮಾತನಾಡಿ, ‘ಬಾಲಕಾರ್ಮಿಕ ಪದ್ದತಿಯನ್ನ ಬೇರು ಸಮೇತ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಈ ಪ್ರಯತ್ನಕ್ಕೆ ಸಂಘ– ಸಂಸ್ಥೆ, ಸಂಘಟನೆಗಳು ಹಾಗೂ ಸಮುದಾಯಗಳು ಸಹ ಕೈ ಜೋಡಿಸಿದರೆ ಈ ಪದ್ಧತಿಗೆ ಸಂಪೂರ್ಣ ಕಡಿವಾಣ ಬೀಳಲಿದೆ’ ಎಂದು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಸತೀಶ್ ಮಾತನಾಡಿ, ‘ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ಅಧಿಕಾರಿಗಳ ಪ್ರಯತ್ನಕ್ಕೆ ಸಾರ್ವಜನಿಕರು ಸಹ ನೆರವಾಗಬೇಕು. ತಮ್ಮ ಸುತ್ತಮುತ್ತಲಿನ ಅಂಗಡಿ, ಹೋಟೆಲ್, ಕಾರ್ಖಾನೆ, ತೋಟ ಸೇರಿದಂತೆ ಎಲ್ಲಿಯಾದರೂ ಬಾಲ ಕಾರ್ಮಿಕರು ಕಂಡುಬಂದಲ್ಲಿ ಕಾರ್ಮಿಕ ಇಲಾಖೆಯ 1098 ಸಹಾಯವಾಣಿಗೆ ಮಾಹಿತಿ ನೀಡಬೇಕು. ಆಗ ಅಧಿಕಾರಿಗಳು ಬಂದು ಮಕ್ಕಳನ್ನು ರಕ್ಷಿಸುತ್ತಾರೆ’ ಎಂದು ತಿಳಿಸಿದರು.

ಅಪ್ಸ ಸಂಸ್ಥೆಯ ಸದಸ್ಯರಾದ ಲಕ್ಷ್ಮಿ ಪ್ರಸನ್ನ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಜಯಪಾಲ್ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಸುಭಾಷ್ ಎಂ. ಆಲದಕಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರಜನಿ ಆರ್., ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತಿಜ್ಞಾ‌ವಿಧಿ ಸ್ವೀಕಾರ

ನಗರದ ಹೊರವಲಯದಲ್ಲಿರುವ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ಘಟಕದ ವತಿಯಿಂದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮವನ್ನು ಆಯೋಜಿಸಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಯ್ಕ ಬಿ.ಟಿ ಅವರು ಬಾಲಕಾರ್ಮಿಕ ವಿರೋಧಿ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯೆ ಡಾ. ಎಸ್. ನಾಗಶೇಷಮ್ಮ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಡಾ. ಸುಮಂತ್ ಎಚ್.ಎಂ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ್ ಪಿ. ವಂದಿಸಿದರು. ಕಾಲೇಜಿನ ಬೋಧಕ ಬೋಧಕೇತರ ನೌಕರರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.