ADVERTISEMENT

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಫೆ. 16ಕ್ಕೆ ಮತದಾನ

​ಪ್ರಜಾವಾಣಿ ವಾರ್ತೆ
Published 20 ಜನವರಿ 2024, 5:53 IST
Last Updated 20 ಜನವರಿ 2024, 5:53 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಮನಗರ: ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ. ಮಾದರಿ ನೀತಿ ಸಂಹಿತೆ ಜ. 16ರಿಂದ ಜಾರಿಗೊಂಡಿದ್ದು, 23ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿದರು.

‘ಕ್ಷೇತ್ರವು ‌ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ಇದುವರೆಗೆ 2,200 ಮತದಾರರು ಇದ್ದಾರೆ. ನೋಂದಣಿಗೆ ಜ. 20ರವರೆಗೆ ಅವಕಾಶವಿದ್ದು, ಮತದಾರರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ’ ಎಂದು ತಮ್ಮ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ಜ. 30ಕ್ಕೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು, 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ. 2ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. 16ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. 20ರಂದು ಮತ ಎಣಿಕೆ ನಡೆಯಲಿದ್ದು, 23ಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದರು.

‘ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿ, ನಾನು ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಅವರು ಮಾದರಿ ನೀತಿ ಸಂಹಿತೆ ಜಾರಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದೇವೆ’ ಎಂದರು.

‘ಈ ಚುನಾವಣೆಗೆ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಯವರು ಮತದಾರರಾಗಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಫ್ಲೈಯಿಂಗ್ ಸ್ಕ್ವಾಡ್ ನೇಮಕವಾಗಲಿದ್ದು, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲಿದೆ. ಮತದಾರರ ಮೇಲೆ ಪ್ರಭಾವ ಬೀರುವಂತಹ ಪಾರ್ಟಿ ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ಮಾಡದಂತೆ ಶಿಕ್ಷಕರ ಸಂಘ–ಸಂಘಟನೆಗಳಿಗೆ ಸೂಚನೆ ನೀಡಲಿದ್ದಾರೆ. ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಈಗಾಗಲೇ ರಾಜಕಾರಣಿಗಳ ಪೋಸ್ಟರ್‌ಗಳನ್ನು ತೆರವು ಮಾಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ, ‘ಅಭ್ಯರ್ಥಿ ಕಡೆಯವರು ಚುನಾವಣಾ ಪ್ರಚಾರದ ಭಾಗವಾಗಿ ಬ್ಯಾನರ್, ಫ್ಲೆಕ್ ಹಾಗೂ ಪೋಸ್ಟರ್ ಹಾಕಬೇಕಾದರೆ ಸಂಬಂಧಪಟ್ಟವರ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಇದ್ದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್‌ನ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.