ರಾಮನಗರ: ತಾಲ್ಲೂಕಿನ ಸಂಗಬಸವನದೊಡ್ಡಿ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಶಿವಾಜಿನಗರದ ಗುಜರಿ ವ್ಯಾಪಾರಿ ಲಿಯಾಖತ್ ಅಲಿ ಖಾನ್ (55), ಪತ್ನಿ ಅಸ್ಮಾ ಪರ್ವೀನ್ (45) ಹಾಗೂ ಸ್ನೇಹಿತ ನೂರ್ ಉಲ್ಲಾ ಷರೀಫ್ (50) ಮೃತರು.
ಮೈಸೂರಿನಲ್ಲಿರುವ ಪುತ್ರಿಯ ಮನೆಗೆ ಲಿಯಾಖತ್ ಅವರು ಪತ್ನಿಯೊಂದಿಗೆ ಸ್ನೇಹಿತನ ಕಾರಿನಲ್ಲಿ ಹೊರಟಿದ್ದರು. ಕಾರು ಚಾಲನೆ ಮಾಡುತ್ತಿದ್ದ ನೂರ್ ಅವರು ಸಂಗಬಸವನದೊಡ್ಡಿ ಬಳಿ ರಾತ್ರಿ 9.30ರ ಸುಮಾರಿಗೆ ನಿಯಂತ್ರಣ ಕಳೆದುಕೊಂಡಿದ್ದು, ಕಾರು ರಸ್ತೆ ವಿಭಜಕದ ಮೇಲೆ ಹತ್ತಿ ಪಲ್ಟಿಯಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಅಶ್ವಮೇಧ ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿ ಶವಗಳನ್ನು ರಾಮನಗರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಹಾನಿಗೊಂಡಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.