ADVERTISEMENT

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ₹640 ಕೋಟಿ ಬಿಡುಗಡೆ: DK ಸುರೇಶ್

ರಾಮದೇವರ ಬೆಟ್ಟದಲ್ಲಿ ರಾಮಮಂದಿರ: ಸರ್ವೇಗೆ ಅರಣ್ಯ ಇಲಾಖೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 12:33 IST
Last Updated 13 ಜನವರಿ 2024, 12:33 IST
ಡಿ.ಕೆ. ಸುರೇಶ್
ಡಿ.ಕೆ. ಸುರೇಶ್   

ರಾಮನಗರ: ‘ಬೆಂಗಳೂರು ಮತ್ತು ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ –275 ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ₹640 ಹಣ ಬಿಡುಗಡೆ ಮಾಡಿದೆ. ಬಾಕಿ ಇರುವ ಕಾಮಗಾರಿಯನ್ನು ಈ ಮೊತ್ತದಲ್ಲಿ ಪೂರ್ಣಗೊಳಿಸಬೇಕಿದೆ’ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆದ್ದಾರಿಯ ಹಲವೆಡೆ ಪ್ರವೇಶ ಮತ್ತು ನಿರ್ಗಮನ ರಸ್ತೆಗಳಿಲ್ಲ. ವಿವಿಧೆಡೆ ಸರ್ವೀಸ್ ರಸ್ತೆ ಕೂಡ ಅಪೂರ್ಣವಾಗಿದೆ. ಸಾರ್ವಜನಿಕರು ರಸ್ತೆ ದಾಟಲು ಮೇಲ್ಸೇತುವೆ ನಿರ್ಮಾಣವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಣ ಬಿಡುಗಡೆ ಮಾಡಿದೆ’ ಎಂದರು.

‘ಸಂಪೂರ್ಣ ಅವೈಜ್ಞಾನಿಕವಾಗಿ ಹೆದ್ದಾರಿ ನಿರ್ಮಿಸಲಾಗಿದೆ. ಹಾಗಾಗಿಯೇ, ಧಾರಾಕಾರವಾಗಿ ಮಳೆ ಸುರಿದರೆ ಈಗಲೂ ಮಳೆ ನೀರು ಸರಾಗವಾಗಿ ಹರಿದು ಹೋಗದೆ, ರಸ್ತೆಯಲ್ಲೇ ನಿಲ್ಲುತ್ತದೆ. ಅಪಘಾತಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಇನ್ನೂ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹಿಂದೆ ಹೆದ್ದಾರಿ ಸಚಿವಾಲಯದ ಅಧಿಕಾರಿಗಳು ಬಂದಾಗ ಈ ವಿಷಯವನ್ನು ಅವರ ಗಮನಕ್ಕೆ ತಂದಿದ್ದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ಎಚ್‌ಡಿಕೆ ಎಲ್ಲಾದರೂ ಸ್ಪರ್ಧಿಸಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು, ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ. ಇಲ್ಲಿ ಹೋರಾಟ ಶುರುವಾಗಿದೆ. ವೇದಿಕೆಯೂ ಸಿದ್ಧವಾಗಿದೆ. ಆದರೆ, ನಾನಿನ್ನೂ ತಯಾರಾಗಿಲ್ಲ’ ಎಂದು ನಗೆ ಬೀರಿದರು.

ರಾಮಮಂದಿರ: ಸರ್ವೇಗೆ ಸೂಚನೆ

‘ನಗರದ ಹೊರವಲಯದಲ್ಲಿರುವ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಲ್ಲಿ ಎಷ್ಟು ಜಾಗ ಲಭ್ಯವಿದೆ ಎಂಬುದರ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಕೇಳಲಾಗಿದೆ. ರಾಮದೇವರ ಬೆಟ್ಟ ಪರಿಸರ ಸೂಕ್ಷ್ಮ ವಲಯವಾಗಿದ್ದು, ಉದ್ದ ಕೊಕ್ಕಿನ ರಣಹದ್ದುಗಳ ಆವಾಸಸ್ಥಾನವಾಗಿದೆ. ಹಾಗಾಗಿ, ಸರ್ವೇ ಮಾಡಿ ವರದಿ ಕೊಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಬೆಟ್ಟದ ಅಭಿವೃದ್ಧಿ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು’ ಎಂದು ಡಿ.ಕೆ. ಸುರೇಶ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.