ADVERTISEMENT

ಮಾಗಡಿ: ಸೆ.13ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿ.ಎಂ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 5:02 IST
Last Updated 9 ಸೆಪ್ಟೆಂಬರ್ 2024, 5:02 IST
ಮಾಗಡಿಯಲ್ಲಿ ಸೆ.13ರಂದು ಮುಖ್ಯಮಂತ್ರಿ ಆಗಮಿಸುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶಾಸಕ ಎಚ್.ಸಿ.ಬಾಲಕೃಷ್ಣ ಬಿಡುಗಡೆಗೊಳಿಸಿದರು
ಮಾಗಡಿಯಲ್ಲಿ ಸೆ.13ರಂದು ಮುಖ್ಯಮಂತ್ರಿ ಆಗಮಿಸುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶಾಸಕ ಎಚ್.ಸಿ.ಬಾಲಕೃಷ್ಣ ಬಿಡುಗಡೆಗೊಳಿಸಿದರು   

ಮಾಗಡಿ: ಸೆ.13ರಂದು ಬೆಳಗ್ಗೆ 11:30ಕ್ಕೆ ಪಟ್ಟಣದ ಹೊಸಪೇಟೆ ಸರ್ಕಲ್ ಬಳಿ ₹70ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ₹70ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದ್ದು ಇದರಲ್ಲಿ ಐಟಿಐ ಕಾಲೇಜು ಉದ್ಘಾಟನೆ, ₹10ಕೋಟಿ ವೆಚ್ಚದಲ್ಲಿ ಆಡಿಟೋರಿಯಂ, ₹5ಕೋಟಿ ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ, ಡಿಪ್ಲೊಮೊ ಕಾಲೇಜು, ₹22 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈಗ ಅವರ ಅವಧಿಯಲ್ಲಿ ಗೌರಿ ಹಬ್ಬದ ದಿನದಂದು ಲೋಕಾರ್ಪಣೆಗೊಂಡಿದೆ. ತಾಲ್ಲೂಕಿನ ಕುದೂರು ಮಾರ್ಗವಾಗಿ ಎತ್ತಿನಹೊಳೆ ಯೋಜನೆ ಹಾದು ಹೋಗುತ್ತಿದ್ದು ತಮ್ಮೇನಹಳ್ಳಿ ಕೆರೆಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು ಎಂದರು.

ADVERTISEMENT

ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದರೆ ತಲೆ ಬೋಡಿಸಿಕೊಳ್ಳುತ್ತೇನೆ ಎಂದು ಎಚ್. ಡಿ.ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈಗ ಅವರನ್ನು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಪಟ್ಟಣದ ಹೊಸಪೇಟೆ ವೃತ್ತದ ಬಳಿ ₹6ಕೋಟಿ ವೆಚ್ಚದಲ್ಲಿ ನೂತನ ಬಮುಲ್ ಶಿಬಿರ ಕಚೇರಿ ನಿರ್ಮಾಣ ಮಾಡಿದ್ದು ರೈತರಿಗೆ ಅನುಕೂಲವಾಗಲಿದೆ ಎಂದು ಬಮುಲ್ ನಿರ್ದೇಶಕ ನರಸಿಂಹಮೂರ್ತಿ ವಿವರಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.