ADVERTISEMENT

ಕರಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 5:08 IST
Last Updated 19 ಮಾರ್ಚ್ 2024, 5:08 IST

ರಾಮನಗರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾರ್ಚ್ 16ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಹಾಗೂ ಬ್ಯಾನರ್ ಮುದ್ರಿಸುವ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು.

ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಹಾಗೂ ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಮುದ್ರಕರು ಕರಪತ್ರ ಮತ್ತು ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು.

ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಪ್ರತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಚುನಾವಣಾಧಿಕಾರಿಗೆ ಸಲ್ಲಿಸಬೇಕು. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು.

ADVERTISEMENT

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಅನುಸಾರ ಬ್ಯಾನರ್, ಪ್ಲೆಕ್ಸ್ ಹಾಗೂ ಕರಪತ್ರ ಮುದ್ರಿಸುವಾಗ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.