ರಾಮನಗರ: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕಂಡಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಐಜೂರು ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಹಿಂದೂ ಸಮುದಾಯದ ಪರ ಘೋಷಣೆಗಳನ್ನು ಕೂಗಿದರು. ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮಾತನಾಡಿ, ಸಮಾಜದಲ್ಲಿ ಬೆಳಕು ಕಾಣಬೇಕಾದ ಯುವಕನ ಕಗ್ಗೊಲೆಯನ್ನು ನಾನು ಖಂಡಿಸುತ್ತೇನೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಸರ್ಕಾರ ಸಹ ಈಗಾಗಲೇ ಕ್ರಮ ಕೈಗೊಂಡಿದ್ದು, ಆರೋಪಿಗಳನ್ನು ಬಂಧಿಸಿದೆ. ಅಮಾಯಕ ಯುವಕರನ್ನು ಈ ರೀತಿ ಹತ್ಯೆ ಮಾಡುವ ಮೂಲಕ ಸಮಾಜದಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಹಿಂದೂ ಧರ್ಮದ ಪರವಾಗಿ ಇರುವವರ ಹೋರಾಟ ಮಾಡುವವರನ್ನು ಹತ್ಯೆ ಮಾಡುವ ಮೂಲಕ ಅಂತಹ ಹೋರಾಟವನ್ನು ಹಕ್ಕಿಕ್ಕುವ ಪ್ರಯತ್ನ ಮಾಡಿದವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ’ ಎಂದರು. ಹರ್ಷ ಕುಟುಂಬಕ್ಕೆ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡುವುದಾಗಿ ಅವರು ಘೋಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.