ADVERTISEMENT

ಪಹಣಿಯಲ್ಲಿ ವಕ್ಫ್ ಹೆಸರಿಗೆ ಆಕ್ರೋಶ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರೈತ ಸಂಘ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 5:51 IST
Last Updated 6 ನವೆಂಬರ್ 2024, 5:51 IST
ರಾಮನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಇತ್ತೀಚೆಗೆ ಸುದ್ದಿಗೋ‌ಷ್ಠಿ ನಡೆಸಿದರು
ರಾಮನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಇತ್ತೀಚೆಗೆ ಸುದ್ದಿಗೋ‌ಷ್ಠಿ ನಡೆಸಿದರು   

ರಾಮನಗರ: ‘ರಾಜ್ಯ ಸರ್ಕಾರ ಬಡ ರೈತರ ಸಾವಿರಾರು ಎಕರೆ ಜಮೀನನ್ನು ವಕ್ಫ್ ಮಂಡಳಿಗೆ ವರ್ಗಾವಣೆ ಮಾಡುವ ಮೂಲಕ, ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿದೆ. ರೈತರ ಜಮೀನಿನ ಪಹಣಿಯಲ್ಲಿ ದಾಖಲಾಗಿರುವ ವಕ್ಫ್ ಹೆಸರನ್ನು ಕೂಡಲೇ ತೆಗೆಯಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ. ಮಲ್ಲಯ್ಯ ಎಚ್ಚರಿಕೆ ನೀಡಿದರು.

‘ಸರ್ಕಾರ ಒಂದು ಧರ್ಮದ ಒಲೈಕೆಗಾಗಿ ರೈತರ ಜಮೀನುಗಳನ್ನು ಕಸಿದುಕೊಳ್ಳುತ್ತಿದೆ. ಇಂತಹ ರೈತ ವಿರೋಧಿ ನಡವಳಿಕೆಯನ್ನು ರೈತ ಸಂಘ ವಿರೋಧಿಸುತ್ತದೆ. ಈಗಾಗಲೇ ರಾಜ್ಯದಲ್ಲಿ ರೈತರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಆದರೂ ರಾಜ್ಯ ಸರ್ಕಾರ ಜಾಣ ಮೌನ ವಹಿಸಿದೆ’ ಎಂದು ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಇತ್ತೀಚೆಗೆ ನಡೆದ ಸುದ್ದಿಗೋ‌ಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದು, ಮೇಕೆದಾಟು ಯೋಜನೆ ಜಾರಿ, ನೀರಾವರಿ ಯೋಜನೆಗಳ ಅನುಷ್ಠಾನ, ಆಡಳಿತ ಸುಧಾರಣೆ, ಭ್ರಷ್ಟಾಚಾರ ನಿಗ್ರಹ ಸೇರಿದಂತೆ ವಿವಿಧ ಭರವಸೆಗಳನ್ನ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನರ ಭಾವನೆ ಬೇರೆಡೆ ಸೆಳೆಯಲು ವಕ್ಪ್ ಅಸ್ತ್ರ ಬಳಸಿ ಬಡ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದೆ’ ಎಂದು ದೂರಿದರು.

ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ಕಂದಾಯ, ಕೃಷಿ, ಅರಣ್ಯ, ಜಿಲ್ಲಾ ಪಂಚಾಯಿತಿಗೆ ಸೇರಿದ ರೈತರ ಸಮಸ್ಯೆಗಳು ಸಾಕಷ್ಟಿವೆ. ಆದರೆ ಸಮಸ್ಯೆಗಳನ್ನು ಹೇಳಿಕೊಳ್ಳಲು ಶಾಂತಿಯುತವಾಗಿ ರೈತರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸದ ಸ್ಥಿತಿ ಇದೆ. ಜಿಲ್ಲಾಧಿಕಾರಿ ಸರ್ವಾಧಿಕಾರಿ ಆಗಿದ್ದಾರೆ. ಈ ಕುರಿತು ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಚನ್ನಪಟ್ಟಣ ತಾಲ್ಲೂಕು ರೈತ ಸಂಘ ಅಧ್ಯಕ ರಾಮೇಗೌಡ, ರಾಜ್ಯ ಸಮಿತಿ ಸದಸ್ಯರಾದ ಕೆ.ಎಸ್. ರಾಜು, ಎಚ್.ಸಿ. ಕೃಷ್ಣಯ್ಯ, ಜಿಲ್ಲಾ ಕಾರ್ಯದರ್ಶಿ ಎಂ. ಪುಟ್ಟಸ್ವಾಮಿ, ರಾಮನಗರ ತಾಲ್ಲೂಕು ಅಧ್ಯಕ್ಷ ನಾಗರಾಜು, ಮಾಗಡಿ ತಾಲ್ಲೂಕು ಅಧ್ಯಕ್ಷ ಲೋಕೇಶ್, ಮುಖಂಡರಾದ ಶಿವಲಿಂಗಯ್ಯ, ಎಂ.ಸಿ. ವಿಶ್ವನಾಥ್, ಮುನಿರಾಜು, ಬೋರೇಗೌಡ, ವರದರಾಜು ಮುಂತಾದವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.