ಮಾಗಡಿ: ವಡೇರಹಳ್ಳಿಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿ ಬಳಿ ಸೋಮವಾರ ಲಾರಿ ಮಾಲೀಕ ನಾಗೇಶ್ ಸಿ. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೊಸಪೇಟೆ ವೃತ್ತಕ್ಕೆ ಮಂಗಳವಾರ ಬೆಳಗ್ಗೆ ಆಂಬುಲೆನ್‌ನಲ್ಲಿ ಶವ ತರಲಾಯಿತು.
ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು ಹಾಗೂ ಹೊಸಪೇಟೆ ಗ್ರಾಮಸ್ಥರು, ಅಧಿಕಾರಿಗಳ ಕಿರುಕುಳದಿಂದ ನಾಗೇಶ್ ನೇಣು ಹಾಕಿಕೊಂಡು ಸಾವನ್ನಪ್ಪಿದ್ದು ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ರಸ್ತೆ ತಡೆದು ಆಗ್ರಹಿಸಿದರು.
ಸ್ಥಳಕ್ಕೆ ಅಧಿಕಾರಿಗಳು ಬರಬೇಕು. ಅಲ್ಲಿಯವರೆಗೂ ಶವವನ್ನು ಇಲ್ಲಿಂದ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಮಾಗಡಿ– ಬೆಂಗಳೂರು, ಮಾಗಡಿ– ರಾಮನಗರ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು.
ಪೊಲೀಸ್ ಇನ್‌ಸ್ಪೆಕ್ಟರ್ ಗಿರಿರಾಜ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಲ್ಲಿ ಯಶಸ್ವಿಯಾದರು. ನಂತರ ಶವವನ್ನು ಕೊಂಡೊಯ್ಯಲು ಅವಕಾಶ ಮಾಡಿಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.