ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಅಗತ್ಯ ಇರುವ ಜಮೀನನ್ನು ಕೂಡಲೇ ಹಸ್ತಾಂತರ ಮಾಡುವಂತೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ವಿ.ವಿ.ಗೆ ಈ ಹಿಂದೆ 216 ಎಕರೆ ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಇದರಲ್ಲಿ ವಿ.ವಿ. ಕಾಮಗಾರಿಗೆ 71 ಎಕರೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ 145 ಎಕರೆ ಮೀಸಲಾಗಿದೆ. ಇದರಲ್ಲಿ ಒಟ್ಟು 76 ಎಕರೆ ಜಮೀನಿನ ಮಾಲೀಕರು ನ್ಯಾಯಾಲಯದ ಮೆಟ್ಟಿಲು ಏರಿರುವ ಕಾರಣ ತೊಂದರೆ ಆಗಿದೆ ಎಂದು ಕೆಐಎಡಿಬಿ ಅಧಿಕಾರಿಗಳು ಮಾಹಿತಿ ನೀಡಿದರು.
ಇಷ್ಟು ವರ್ಷ ಕಾನೂನು ಸಮರ ನಡೆದರೂ ಇನ್ನು ಯಾಕೆ ಇತ್ಯರ್ಥಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಕೂಡಲೇ ಇತ್ಯರ್ಥಕ್ಕೆ ಕ್ರಮ ಕೈಗೊಂಡು ಜಮೀನು ಹಸ್ತಾಂತರ ಮಾಡುವಂತೆ ಸೂಚಿಸಿದರು.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆದಿದೆ. ಜಿಲ್ಲೆಯ ಯಾವೊಬ್ಬ ಶಾಸಕರೂ ಪಾಲ್ಗೊಂಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.