ಚನ್ನಪಟ್ಟಣ: ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪಾಠಪ್ರವಚನಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅರಳಾಳುಸಂದ್ರದ ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು ಗುರುವಾರ ತರಗತಿಗೆ ಗೈರುಹಾಜರಾಗಿ ಶಾಲಾವರಣದಲ್ಲಿ ಪ್ರತಿಭಟನೆ ನಡೆಸಿದರು.
ಶಾಲೆಗೆ ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂದು ಶಾಲಾ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯೊಬ್ಬರ ತಲೆ ಕೂದಲನ್ನು ಕತ್ತರಿಸಿ ಪೋಷಕರ ಆಕ್ರೋಶಕ್ಕೆ ಒಳಗಾಗಿ ಮುಖ್ಯಶಿಕ್ಷಕ ಅಮಾನತ್ತು ಹಾಗೂ ಅತಿಥಿ ಶೀಕ್ಷಕಿ ಗೇಟ್ ಪಾಸ್ ಆದ ಘಟನೆಯ ಬೆನ್ನ ಹಿಂದೆಯೇ ಶಿಕ್ಷಕರ ಕೊರತೆಯನ್ನು ನೀಗಿಸುವಂತೆ ಒತ್ತಾಯಿಸಿ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.
ಎಂದಿನಂತೆ ಬೆಳಿಗ್ಗೆ ಶಾಲೆಗೆ ಬಂದ ಪ್ರೌಢಶಾಲಾ ವಿದ್ಯಾರ್ಥಿಗಳು ತರಗತಿಗೆ ಹೋಗದೆ ಶಾಲಾವರಣದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಶಿಕ್ಷಕರ ಕೊರತೆಯಿಂದ ಪಾಠ ಪ್ರವಚನಕ್ಕೆ ತೊಂದರೆ ಎದುರಾಗಿದೆ. 8 ರಿಂದ 10ನೇ ತರಗತಿಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದೇವೆ. ನಾವೆಲ್ಲರೂ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದೇವೆ. ಶಾಲೆಯಲ್ಲಿ ವಿಷಯವಾರು ಶಿಕ್ಷಕರು ಇಲ್ಲ. ಮುಂಬರುವ ಅರ್ಧ ವಾರ್ಷಿಕ, ವಾರ್ಷಿಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ ಎಂದು ಸಮಸ್ಯೆ ತೋಡಿಕೊಂಡರು.
ಇತ್ತೀಚೆಗೆ ಶಾಲಾ ಮುಖ್ಯ ಶಿಕ್ಷಕರನ್ನು ಅಮಾನತ್ತು ಮಾಡಲಾಗಿದೆ. ಇಬ್ಬರು ಅತಿಥಿ ಶಿಕ್ಷಕರಿಗೆ ಗೇಟ್ ಪಾಸ್ ಕೊಡಲಾಗಿದೆ. ಶಾಲೆಯಲ್ಲಿ 4 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ನಮ್ಮ ಸಮಸ್ಯೆಯನ್ನು ಕೇಳಿ ಕೂಡಲೇ ಶಿಕ್ಷಕರನ್ನು ನಿಯೋಜನೆ ಮಾಡಬೇಕು. ಶಿಕ್ಷಕರನ್ನು ನಿಯೋಜನೆ ಮಾಡುವವರೆಗೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.
ಚನ್ನಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನ ಖಾಲಿ ಇರುವ ಕಾರಣ ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಮಾತನಾಡಿ ಶೀಘ್ರವೇ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.