ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂ ಕಾರ್ಯಕರ್ತರು ಹಾಗೂ ಸಂಘಟನೆಗಳನ್ನು ಗುರಿಯಾಗಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಪೊಲೀಸ್ ಇಲಾಖೆಯು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿ ಜೈಲಿಗೆ ಕಳಿಸುತ್ತಿದೆ. ಸರ್ಕಾರವು ಒಂದು ಕೋಮನ್ನು ಓಲೈಸುವ ಸಲುವಾಗಿ ಹಿಂದೂ ವಿರೋಧಿ ಕ್ರಮಗಳನ್ನು ಅನುಸರಿಸುತ್ತಿದೆ. ರಾಜ್ಯದ ವಿವಿಧೆಡೆ ಇಂತಹ ಘಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಹೀಗೆಯೇ ಮುಂದುವರಿದರೆ ಹಿಂದೂಗಳು ಸರ್ಕಾರದ ವಿರುದ್ಧ ರೊಚ್ಚಿಗೆದ್ದು ರಸ್ತೆಗಿಳಿಯಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ರಾಮೋತ್ಸವ ಮಾಡುತ್ತೇನೆ ಎನ್ನುತ್ತಾರೆ. ಆದರೆ, ರಾಮದೇವರ ಬೆಟ್ಟವನ್ನು ದಕ್ಷಿಣ ಭಾರತದ ಅಯೋಧ್ಯೆ ರೀತಿ ಅಭಿವೃದ್ಧಿಪಡಿಸಲು ಹಿಂದಿನ ಬಿಜೆಪಿ ಸರ್ಕಾರ ಬಜೆಟ್‍ನಲ್ಲಿ ಅನುದಾನ ಮೀಸಲಿಟ್ಟಿತ್ತು. ನಂತರ ಬಂದ ಕಾಂಗ್ರೆಸ್ ಸರ್ಕಾರ ಆ ಬಗ್ಗೆ ಚಕಾರ ಎತ್ತಿತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸೇನೆಯ ಜಿಲ್ಲಾ ಕಾರ್ಯದರ್ಶಿ ಕೆ.ಎನ್. ನವೀನ್, ತಾಲ್ಲೂಕು ಅಧ್ಯಕ್ಷ ರಾಜ್‍ಗೋಪಾಲ್, ಪ್ರಧಾನ ಕಾರ್ಯದರ್ಶಿ ಸಿ.ಎಸ್. ಶರತ್, ಮುಖಂಡರಾದ ಇಂದ್ರೇಶ್, ಪವನ್, ಸುರೇಶ್, ದಿಲೀಪ್, ವಿನೋದ್, ದರ್ಶನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.