ADVERTISEMENT

ಕಾರ್ಮಿಕ ಇಲಾಖೆಯಿಂದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 15:35 IST
Last Updated 5 ಅಕ್ಟೋಬರ್ 2024, 15:35 IST
<div class="paragraphs"><p>ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸವಿತಾ ಪಿ.ಆರ್. ಕಾರ್ಯಗಾರವನ್ನು ಉದ್ಘಾಟಿಸಿದರು.</p></div>

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸವಿತಾ ಪಿ.ಆರ್. ಕಾರ್ಯಗಾರವನ್ನು ಉದ್ಘಾಟಿಸಿದರು.

   

ರಾಮನಗರ: ಕಾರ್ಮಿಕರ ಹಕ್ಕುಗಳ ಬಗ್ಗೆ ಅರಿವಿಲ್ಲದಿದ್ದರೆ ಜೀವನ ಕಷ್ಟಕರವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್. ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆ, ಚನ್ನಪಟ್ಟಣದ ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಹಾಗೂ ಬೆಂಗಳೂರಿನ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಕಾರ್ಮಿಕರ ಹಕ್ಕುಗಳು ಹಾಗೂ ಅವರ ಅಭ್ಯುದಯಕ್ಕೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡಿದೆ. ಇದರ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಹಾಗೂ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಬಗ್ಗೆ ಮನವರಿಕೆ ಮಾಡಿಕೊಡಲು ಈ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ದಿನಪತ್ರಿಕೆ ಓದಿ ಮಾಹಿತಿ ಪಡೆದುಕೊಳ್ಳಬೇಕು. ತಂತ್ರಜ್ಞಾನದ ಈ ಯುಗದಲ್ಲಿ ಈ ಮಾಹಿತಿಯನ್ನು ಸುಲಭವಾಗಿ ಪಡೆದುಕೊಳ್ಳಬಹುದು ಎಂದರು.

ಸಾಕಷ್ಟು ಜನರಿಗೆ ಅರಿವಿನ ಕೊರತೆಯಿಂದ ಈ ಯೋಜನೆಗಳ ಮಾಹಿತಿ ಇರುವುದಿಲ್ಲ. ಅವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿದರೆ ಅಥವಾ ಸಹಾಯವಾಣಿ 15100 ಗೆ ಕರೆ ಮಾಡಿ ಅಥವಾ ಜಿಲ್ಲಾ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ ಯೋಜನೆಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು, ಅಹವಾಲುಗಳನ್ನು ಸಲ್ಲಿಸಿದ್ದಲ್ಲಿ, ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಮಿಕರ ಒಳಿತಿಗಾಗಿ ಈ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಎಲ್ಲರೂ ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಪೂರ್ಣ ಮಾಹಿತಿ ತಿಳಿದುಕೊಂಡು ಇತರೆ ಕಾರ್ಮಿಕರಿಗೂ ತಿಳಿಸಿ, ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರಾಮನಗರ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ತಿಮ್ಮೇಗೌಡ ಮಾತನಾಡಿ, ಸಮಾಜದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕಾರ್ಮಿಕರಿದ್ದಾರೆ. ಅವರಿಗೆಲ್ಲಾ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ತಲುಪಿಸುವವರು ಅಧಿಕಾರಿಗಳು, ಅದಕ್ಕೆ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕ ಸಂಘನೆಗಳ ಪದಾಧಿಕಾರಿಗಳು ಎಲ್ಲಾ ಕಾರ್ಮಿಕರಿಗೂ ಈ ಯೋಜನೆಗಳ ಮಾಹಿತಿಯನ್ನು ತಿಳಿಸಿ, ಕಾರ್ಮಿಕರ ಸದಸ್ಯತ್ವಕ್ಕೆ ನೋಂದಾಯಿಸಿಕೊಂಡು ಸರ್ಕಾರದಿಂದ ದೊರೆಯುವ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಮಾಹಿತಿ ರವಾನಿಸಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಖಜಾಂಚಿ ಮಂಜೇಶ್ ಗೌಡ ಮಾತನಾಡಿದರು. ಕನಕಪುರ ವೃತ್ತ ನಿರೀಕ್ಷಕ ಜಯ ಪ್ರಕಾಶ್ ಆರ್. ಸ್ವಾಗತಿಸಿದರು. ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆಯ ಜಂಟಿ ನಿರ್ದೇಶಕ ಪಾರ್ಥಸಾರಥಿ ಆರ್.ಕೆ., ಎಸ್. ಲೋಲಾಕ್ಷಿ ರಾವ್, ಚನ್ನಪಟ್ಟಣದ ಬ್ರಾಂಚ್ ಮ್ಯಾನೇಜರ್ ಎಸ್. ಸೆಲ್ವಾ ಗ್ರೇಸಿ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್.ಆರ್. ಹಾಗೂ ಇತರರು ವೇದಿಕೆಯಲ್ಲಿದ್ದರು. ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕ ಸಂಘನೆಗಳ ಪದಾಧಿಕಾರಿಗಳು ತರಬೇತಿಗೆ ಹಾಜರಾಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.