ADVERTISEMENT

ಮಕ್ಕಳ ಆರೋಗ್ಯದ ನಿಗಾ ವಹಿಸಿ: ದಿಗ್ವಿಜಯ್ ಬೋಡ್ಕೆ

ಅಂತರ ಇಲಾಖೆಗಳ ಸಮನ್ವಯ ಸಮಿತಿಯಲ್ಲಿ ಜಿ.ಪಂ. ಸಿಇಒ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 5:45 IST
Last Updated 25 ಜುಲೈ 2024, 5:45 IST
ರಾಮನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಸಿಇಒ ದಿಗ್ವಿಜಯ್ ಬೋಡ್ಕೆ ನೇತೃತ್ವದಲ್ಲಿ, ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ಜರುಗಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್ ಹಾಗೂ ಇತರರು ಇದ್ದಾರೆ
ರಾಮನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಸಿಇಒ ದಿಗ್ವಿಜಯ್ ಬೋಡ್ಕೆ ನೇತೃತ್ವದಲ್ಲಿ, ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ಜರುಗಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್ ಹಾಗೂ ಇತರರು ಇದ್ದಾರೆ    

ರಾಮನಗರ: ‘ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ, ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು. ಡೆಂಗಿ ಸೇರಿದಂತೆ ಇತರ ರೋಗಗಳು ಹರಡದಂತೆ ಅಧಿಕಾರಿಗಳು ಮುನ್ನೆಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಡೆಂಗಿ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಕುರಿತು ನಿಗಾ ವಹಿಸಬೇಕು. ರೋಗ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

‘ಸಾರ್ವಜನಿಕ ಸ್ಥಳಗಳು, ಮನೆ ಸುತ್ತಮುತ್ತಲಿನ ಜಾಗದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವ ಕುರಿತು ವ್ಯಾಪಕ ಪ್ರಚಾರ ನಡೆಸಬೇಕು. ಸಾಂಕ್ರಾಮಿಕ ರೋಗಗಳನ್ನು ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಸ್ವಚ್ಛತೆ, ಫಾಗಿಂಗ್ ಸೇರಿದಂತೆ ಇತರ  ಕ್ರಮಗಳನ್ನು ಸಂಬಂಧಪಟ್ಟವರು ಆದ್ಯತೆ ಮೇರೆಗೆ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ನವಜಾತ ಶಿಶು, ಅಂಗನವಾಡಿ, ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷದೊಳಗಿನವರ ಆರೋಗ್ಯ ತಪಾಸಣೆ ಮಾಡಬೇಕು. ಏನಾದರೂ ಆರೋಗ್ಯದ ಸಮಸ್ಯೆಗಳು ಕಂಡುಬಂದರೆ ಅಗತ್ಯ ಚಿಕಿತ್ಸೆ ನೀಡಬೇಕು. ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ತಮ್ಮ ತಾಲ್ಲೂಕಿನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಮಕ್ಕಳ ಆರೋಗ್ಯದ ವರದಿಯನ್ನು ಕಾಲ ಕಾಲಕ್ಕೆ ನೀಡಬೇಕು’ ಎಂದು ಹೇಳಿದರು.

‘ಚಿಕಿತ್ಸೆಗೆ ಬಾಕಿ ಉಳಿದಿರುವ ಮಕ್ಕಳನ್ನು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಾಯದಿಂದ ಗುರುತಿಸಿ, ಅವರ ಆರೋಗ್ಯದ ಸ್ಥಿತಿಗತಿಯ ಮಾಹಿತಿ ಪಡೆಯಬೇಕು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆಯೂ ನಿಗಾ ವಹಿಸಬೇಕು. ಮಕ್ಕಳ ಶಸ್ತ್ರಚಿಕಿತ್ಸೆಯು ಸೂಕ್ಷ್ಮ ವಿಷಯವಾಗಿದೆ. ನ್ಯೂನತೆ ಇರುವ ಮಕ್ಕಳನ್ನು ಜಿಲ್ಲಾ ಶಸ್ತ್ರಚಿಕಿತ್ಸಾಧಿಕಾರಿ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಶಶಿಧರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್, ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.