ಶಿವಮೊಗ್ಗ: ಧರ್ಮ, ಧರ್ಮಗಳ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಶೋಕ ವೃತ್ತದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ‘ಈಶ್ವರಪ್ಪ ಕೋಮುಭಾವನೆ ಕೆರಳಿಸುವ ಜತೆಗೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡಿದ್ದಾರೆ. ಪದೇಪದೇ ಅನ್ಯಧರ್ಮಿಯರನ್ನು ಗುರಿಯಾಗಿಟ್ಟುಕೊಂಡು ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ದ್ವೇಷ ಭಾಷಣದ ಮೂಲಕ ಸಮಾಜದ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುತ್ತಿರುವ ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಸುಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್, ಹಿಂದುಳಿದ ವರ್ಗಗಳ ಒಕ್ಕೂಟದ ಜಿ.ಡಿ. ಮಂಜುನಾಥ, ಎಸ್.ಪಿ. ಶೇಷಾದ್ರಿ, ಹಾಲೇಶ್ ಬಾಬು, ಎಂ.ಎಸ್. ಶಿವಕುಮಾರ್, ಎಚ್.ಪಿ.ಗಿರೀಶ್, ಕೆ.ಚೇತನ್, ಆರ್. ಶಿವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.