ಸಾಗರ: ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಗುಜರಾತ್ ಸರ್ಕಾರದ ಕುರಿತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಚೆಗೆ ತೀರ್ಪು ನೀಡಿರುವುದು ಕಾರ್ಯಕರ್ತೆಯರ ಬೇಡಿಕೆಗೆ ಬಲ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಇಲ್ಲಿನ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು.
‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹಲವು ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಈ ಹಿಂದೆ ಸದನದಲ್ಲಿ ಧ್ವನಿ ಎತ್ತಿದ್ದೇನೆ. ಮುಂದಿನ ದಿನಗಳಲ್ಲಿಯೂ ನಿಮ್ಮ ಪರವಾಗಿ ನಿಲ್ಲುತ್ತೇನೆ’ ಎಂದು ಭರವಸೆ ನೀಡಿದರು.
‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೂ ಅನುಕೂಲವಾಗಿದೆ. ಅಂಗನವಾಡಿಗಳಿಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ’ ಎಂದರು.
‘ಸರ್ಕಾರದ ಬಹುತೇಕ ಯೋಜನೆಗಳ ಅನುಷ್ಠಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂಬ ಬೇಡಿಕೆ ನ್ಯಾಯಯುತವಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಬೇಕು’ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮಾ ಒತ್ತಾಯಿಸಿದರು.
ಸಿರಿವಂತೆ ವಲಯದ ಅಂಗನವಾಡಿ ಕಾರ್ಯಕರ್ತೆ ಜಯಂತಿ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಮ್ಮ ಜಿ. ಸುವರ್ಣ ನಾಯ್ಕ, ವರಲಕ್ಷ್ಮಿ, ತ್ರಿವೇಣಿ ಶ್ರೀಕಾಂತ್, ಭಾರತಿ, ಕಲಸೆ ಚಂದ್ರಪ್ಪ, ನಗರಸಭೆ ಸದಸ್ಯರಾದ ಮಧುಮಾಲತಿ, ಗಣಪತಿ ಮಂಡಗಳಲೆ, ರವಿ ಲಿಂಗನಮಕ್ಕಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.