ಶಿವಮೊಗ್ಗ: ‘ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಬುಧವಾರ ಪಕ್ಷದ ಸಭೆ ಕರೆಯಲಾಗಿದ್ದು, ನಾನೂ ಭಾಗವಹಿಸುತ್ತಿದ್ದೇನೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿ ನಾಯಕರ ಮನಸ್ಸಿನಲ್ಲಿ ಏನಿ ದೆಯೋ ಗೊತ್ತಿಲ್ಲ. ಅವರ ತೀರ್ಮಾನವೇ ಅಂತಿಮ. ಬಿಜೆಪಿ–ಜೆಡಿಎಸ್ ಹೊಂದಾಣಿಕೆ ನಿಶ್ಚಿತ. ಆದರೆ, ಸ್ಥಾನ ಹಂಚಿಕೆ ಅಂತಿಮವಾಗಿಲ್ಲ’ ಎಂದರು.
‘ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ. ಅವರ ಒಳ್ಳೆಯ ಕೆಲಸಗಳನ್ನು ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ’ ಎಂದರು.
ಚುನಾವಣೆಯಲ್ಲಿ ಹೊಸಬರಿಗೆ ಆದ್ಯತೆ ನೀಡಲಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದ ವರದಿ ಕೈಸೇರಿ ಮೂರು ನಾಲ್ಕು ದಿನ ಕಳೆದರೂ ಸರ್ಕಾರ ಅದನ್ನು ಬಿಡುಗಡೆ ಮಾಡಿಲ್ಲ. ಎಫ್‌ಎಸ್ಎಲ್ ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆ ವರದಿಯಲ್ಲಿರುವ ಅಂಶಗಳನ್ನು ಬಹಿರಂಗಗೊಳಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.