ಶಿವಮೊಗ್ಗ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನ ಪರವಾದ ಕೆಲಸ ಮಾಡುತ್ತಿದೆ. ಉಪ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಒಂದಾಗಿದ್ದರೂ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ಜನರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಯಾವುದೇ ಸಂಶಯ ಬೇಡ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಎಂದರು.
ಶಿಗ್ಗಾವಿಯಲ್ಲಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಮನವೊಲಿಸಲಾಗಿದೆ. ಅವರು ನಾಮಪತ್ರ ವಾಪಸ್ ಪಡೆಯುತ್ತಾರೆ. ಬಂಡಾಯ ಅಭ್ಯರ್ಥಿಗಳು ನಮ್ಮ ಪಕ್ಷದ ಕಾರ್ಯಕರ್ತರೇ ಆಗಿದ್ದಾರೆ ಎಂದು ಹೇಳಿದರು.
ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಕುರಿತಂತೆ ಈಗಾಗಲೇ 3–4 ಕಡೆ ಜಾಗ ಗುರುತಿಸಲಾಗಿದೆ. ಕೇಂದ್ರ ಮತ್ತು ತಜ್ಞರ ತಂಡ ಪರಿಶೀಲನೆ ನಡೆಸಿ ಸೂಕ್ತ ಜಾಗ ಗುರುತಿಸಲಿದ್ದಾರೆ. ಇದಾದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿಜಯಪುರದಲ್ಲಿ ರೈತರ ಆಸ್ತಿಗೆ ವಕ್ಫ್ ಆಡಳಿತ ಮಂಡಳಿ ನೋಟಿಸ್ ನೀಡಿರುವ ಕುರಿತಂತೆ ರಾಜ್ಯ ಸರ್ಕಾರ ಮತ್ತು ಕಂದಾಯ ಇಲಾಖೆ ಪರಿಶೀಲನೆ ಮಾಡಲಿವೆ. ಹಳೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಅವುಗಳ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಈ ಹಿಂದೆ ಉಪ ಮುಖ್ಯಮಂತ್ರಿ ಆಗಿದ್ದಾಗ ನಾನೇ ಚರ್ಚೆ ಮಾಡಿದ್ದೆ. ಈಗ ಅಂತಹ ಯಾವುದೇ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
‘ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಹೇಳಿರುವುದು ನಿಜವೇ’ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ‘ನೀವು ಅವರಿಗೆ ಈ ಪ್ರಶ್ನೆ ಕೇಳಿದರೆ ಹೆಚ್ಚಿನ ಮಾಹಿತಿ ಸಿಗುತ್ತದೆ’ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.