ADVERTISEMENT

ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ | ಸಿಬಿಐಗೆ ವಹಿಸುವುದಿಲ್ಲ: ಜಿ. ಪರಮೇಶ್ವರ

ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆ: ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇದೆ

​ಪ್ರಜಾವಾಣಿ ವಾರ್ತೆ
Published 30 ಮೇ 2024, 15:51 IST
Last Updated 30 ಮೇ 2024, 15:51 IST
ಶಿವಮೊಗ್ಗದ ವಿನೋಬಗರದ ಕೆಂಚಪ್ಪ ಬಡಾವಣೆಯಲ್ಲಿರುವ ದಿ. ಚಂದ್ರಶೇಖರನ್‌ ಮನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭೇಟಿ ನೀಡಿ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದುದ್ದಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್ ಚಿತ್ರದಲ್ಲಿದ್ದಾರೆ
ಶಿವಮೊಗ್ಗದ ವಿನೋಬಗರದ ಕೆಂಚಪ್ಪ ಬಡಾವಣೆಯಲ್ಲಿರುವ ದಿ. ಚಂದ್ರಶೇಖರನ್‌ ಮನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭೇಟಿ ನೀಡಿ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದುದ್ದಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್ ಚಿತ್ರದಲ್ಲಿದ್ದಾರೆ   

ಶಿವಮೊಗ್ಗ: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯದ ಪೊಲೀಸರೇ ಸಮರ್ಥರಿದ್ದಾರೆ. ಸಿಬಿಐಗೆ ವಹಿಸುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಪಿ.ಚಂದ್ರಶೇಖರನ್‌ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಸಿಐಡಿಯು ಗೃಹ ಇಲಾಖೆಯ ಅಂಗ ಸಂಸ್ಥೆ. ಅದರ ಮೇಲೆ ಸರ್ಕಾರ ಪ್ರಭಾವ ಬೀರುತ್ತದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಹಾಗಾದರೆ ಸಿಬಿಐ ಯಾರ ಅಡಿ ಬರುತ್ತದೆ. ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲವೇ? ಬಿಜೆಪಿಯವರು ಸಿಬಿಐ ಮೇಲೆ ಪ್ರಭಾವ ಬೀರಲು ಹೀಗೆ ಮಾತಾಡುತ್ತಿದ್ದಾರೆ. ಕೇಂದ್ರ ಆ ಸಂಸ್ಥೆಯನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು. 

ADVERTISEMENT

‘ಸರ್ಕಾರಕ್ಕೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ. ನಾವೇ ಅವರನ್ನು ನಂಬದಿದ್ದರೆ ಹೇಗೆ? ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒಂದು ವಾರ ಗಡುವು ನೀಡಿದ್ದಾರೆ ಎಂಬುದು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಹೋರಾಟ ಮಾಡಲು ನಮ್ಮ ಅಭ್ಯಂತರವಿಲ್ಲ’ ಎಂದು ತಿರುಗೇಟು ನೀಡಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹ 187 ಕೋಟಿ ಬೇರೆಬೇರೆ ಖಾತೆಗೆ ವರ್ಗಾವಣೆ ಆಗಿದೆ. ಇದರಲ್ಲಿ ₹ 80 ಕೋಟಿಯಿಂದ ₹ 85 ಕೋಟಿ ಅವ್ಯವಹಾರ ಆಗಿದೆ ಎಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಈ ಹಗರಣದಲ್ಲಿ ಭಾಗಿಯಾದ ಎಲ್ಲರ ಮೇಲೆ ತನಿಖೆ ನಡೆಸಿ ಶಿಕ್ಷೆ ಕೊಡಿಸಲಾಗುವುದು. ಸರ್ಕಾರ ಖಂಡಿತವಾಗಿಯೂ ಅಧಿಕಾರಿಯ ಸಾವಿಗೆ ನ್ಯಾಯ ಕೊಡಿಸಲಿದೆ’ ಎಂದರು. 

‘ಬಿಜೆಪಿ ಆಡಳಿತವಿದ್ದಾಗ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ, ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರ ಹೆಸರು ಬರೆದಿದ್ದರು. ಚಂದ್ರಶೇಖರನ್‌ ಡೆತ್‌ನೋಟ್‌ನಲ್ಲಿ ಸಚಿವರ ಮೌಖಿಕ ಆದೇಶ ಎಂದು ಬರೆದಿದ್ದಾರೆ. ಆದರೆ, ಯಾರ ಹೆಸರೂ ಬರೆದಿಲ್ಲ. ಹೀಗಾಗಿ ಪ್ರಕರಣದಲ್ಲಿ ನಿರ್ದಿಷ್ಟವಾಗಿ ಸಚಿವರ ಮೇಲೆ ಹೊಣೆ ಹೊರಿಸಲು ಬರುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಾ.ಪರಮೇಶ್ವರ, ‘ಒಂದು ವೇಳೆ ಸಚಿವ ಬಿ. ನಾಗೇಂದ್ರ ಒತ್ತಡ ಹಾಕಿರುವುದು ಕಂಡು ಬಂದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು. 

ಈ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌, ಕಾಂಗ್ರೆಸ್‌ ಜಿಲ್ಲಾ ಸಮಿತಿ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್, ಮುಖಂಡ ಎಚ್‌.ಸಿ.ಯೋಗೀಶ್‌ ಇದ್ದರು.

ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಬಂಧನ ವಾರೆಂಟ್‌ ಇದೆ. ರಾಜ್ಯಕ್ಕೆ ಬಂದ ಕೂಡಲೇ ಅವರನ್ನು ಎಸ್‌ಐಟಿ ತಂಡ ಬಂಧಿಸಲಿದೆ. ಇದಾದ ಮೇಲೆ ಪ್ರಕರಣದ ಕುರಿತಂತೆ ಸಮಗ್ರ ತನಿಖೆ ನಡೆಸಲಿದೆ. ನೊಂದ ಮಹಿಳೆಯರ ಪರವಾಗಿ ಸರ್ಕಾರ ಇರಲಿದೆ.
ಡಾ.ಜಿ. ಪರಮೇಶ್ವರ ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.