ಶಿವಮೊಗ್ಗ: ‘ಓದಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು. ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಿ’ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ವತಿಯಿಂದ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕಳೆದ ಐದು ವರ್ಷಗಳಲ್ಲಿ ದೇಶದ ಕ್ರೀಡಾ ಕ್ಷೇತ್ರ ಸಾಕಷ್ಟು ಪ್ರಗತಿ ಕಂಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಖೇಲೋ ಇಂಡಿಯಾ ಪರಿಕಲ್ಪನೆಯಡಿ ಮುಂದಿನ ಒಲಿಂಪಿಕ್ಸ್‌ಗೆ ಈಗಿನಿಂದಲೇ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲಾಗುತ್ತಿದೆ’ ಎಂದರು.
‘ದಸರಾ ಕ್ರೀಡಾಕೂಟದಲ್ಲಿ ಟೆನಿಸ್, ಜೂಡೊ, ಯೋಗ, ವಾಲಿಬಾಲ್ ಮತ್ತು ಷಟಲ್ ಬ್ಯಾಡ್ಮಿಂಟನ್ ಸೇರಿದಂತೆ ಒಟ್ಟು 5 ಕ್ರೀಡೆಗಳನ್ನು ಸೇರ್ಪಡೆ ಮಾಡಲಾಗಿದೆ. ಸುಮಾರು 650 ಕ್ರೀಡಾಪಟುಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇಲ್ಲಿ ಆಯ್ಕೆಯಾದವರು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವರು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಹೇಳಿದರು.
ತರಬೇತುದಾರರಾದ ನಾಗರಾಜ್, ಬಾಳಪ್ಪ ಮಾನೆ, ಕೇಶವನ್, ಶ್ರೀಕಾಂತ್ ಹಾಗೂ ಜಮಾಲ್ ಅಹಮದ್ ವೇದಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.