ADVERTISEMENT

ಶಿವಮೊಗ್ಗ | ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

-

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 15:47 IST
Last Updated 12 ಜೂನ್ 2024, 15:47 IST

ಶಿವಮೊಗ್ಗ: ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ  ನಿರ್ದೇಶಕರ ಆಯ್ಕೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ಆರಂಭ:

ಈ ಹಿಂದೆ ಏ.6ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಲೋಕಸಭೆ ಚುನಾವಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕಿತ್ತು. ಹಾಗಾಗಿ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡಿತ್ತು. ಈಗ ಹೊಸದಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಜೂ.12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಜೂನ್‌ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಎಂದು ಚುನಾವಣಾಧಿಕಾರಿಯೂ ಆದ ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಎಚ್‌.ಸತ್ಯನಾರಾಯಣ ತಿಳಿಸಿದ್ದಾರೆ.

ADVERTISEMENT

ವಿವಿಧ ಕ್ಷೇತ್ರದಿಂದ 13 ನಿರ್ದೇಶಕರ ಆಯ್ಕೆ

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಜೂನ್‌ 12 ರಿಂದ ಜೂನ್‌ 20ರವರೆಗೆ ಅವಕಾಶವಿದೆ. ಜೂನ್‌ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಜೂನ್‌ 22ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಅದೇ ದಿನ ಪ್ರಕಟಿಸಲಾಗುತ್ತದೆ. ಅಲ್ಲದೆ ಅವಶ್ಯವಿದ್ದಲ್ಲಿ ಚುನಾವಣೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಜೂನ್‌ 24ರಂದು ಚುನಾವಣೆ ಚಿಹ್ನೆಯೊಂದಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌ 28ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಕಟ್ಟಡದಲ್ಲಿ ಮತದಾನ ನಡೆಯಲಿದೆ. ಮತದಾನ ಮುಗಿಯುತ್ತಿದ್ದಂತೆ ಎಣಿಕೆ ಕಾರ್ಯ ನಡೆಯಲಿದೆ. ಪೂರ್ಣಗೊಳ್ಳುತ್ತಿದ್ದಂತೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.