ADVERTISEMENT

ಭದ್ರಾವತಿ | PTCL ಕಾಯ್ದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 15:35 IST
Last Updated 26 ನವೆಂಬರ್ 2024, 15:35 IST
ಭದ್ರಾವತಿಯ ತಾಲೂಕು ಪಂಚಾಯಿತಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೂ ಮುನ್ನ ಮಾಜಿ ಪ್ರಧಾನಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು
ಭದ್ರಾವತಿಯ ತಾಲೂಕು ಪಂಚಾಯಿತಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೂ ಮುನ್ನ ಮಾಜಿ ಪ್ರಧಾನಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು    

ಭದ್ರಾವತಿ: ಪಿಟಿಸಿಎಲ್ ಕಾಯ್ದೆ ನಿರ್ಲಕ್ಷಿಸುವ ಜೊತೆಗೆ ಉಲ್ಲಂಘನೆ ಮಾಡುತ್ತಿರುವ ಹಾಗೂ ಮನಸ್ಸಿಗೆ ಬಂದಂತೆ ಆದೇಶಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಮುಂಭಾಗ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ದೇಶದ ಶೋಷಿತ ಬಡವರ್ಗದ ಜನರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಪೈಕಿ ಪಿಟಿಸಿಎಲ್ ಕಾಯ್ದೆ ಸಹ ಒಂದಾಗಿದೆ. ಈ ಕಾಯ್ದೆಯನ್ನು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರು’ ಎಂದು ಹೇಳಿದರು.

‘ಈ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿ ವರ್ಗ ವಿಫಲವಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಕಾಯ್ದೆಯನ್ನು ಉಲ್ಲಂಘನೆ ಮಾಡುವ ಜೊತೆಗೆ ಮನಸ್ಸಿಗೆ ಬಂದಂತೆ ಆದೇಶಿಸಲಾಗುತ್ತಿದೆ. ಇಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಡವರ್ಗದವರನ್ನು ರಕ್ಷಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಹಿರಿಯ ಕಾರ್ಮಿಕ ಮುಖಂಡ ಡಿ.ಸಿ. ಮಾಯಣ್ಣ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಭಾವಚಿತ್ರ ಪುಷ್ಪ ನಮನ ಸಲ್ಲಿಸಿ ಪ್ರತಿಭಟನೆಗೆ ಚಾಲನೆ ನೀಡಿದರು.

ಪ್ರಮುಖರಾದ ಅರುಣ್ ಕುಮಾರ್, ಶಶಿಕುಮಾರ್ ಗೌಡ, ಎನ್.ಮಂಜುನಾಥ್, ವೈ.ಶಶಿಕುಮಾರ್, ಎಂ.ಬಿ.ಚಂದ್ರಶೇಖರ್, ವಿ.ಈರೇಶ್, ಪತ್ರೆಶ್, ಸಂಗಮ, ಮಂಜಮ್ಮ, ಸುವರ್ಣಮ್ಮ, ಕಮಲಮ್ಮ, ಗೌರಮ್ಮ, ಟೀ ಶ್ವೇತಾ, ಪವಿತ್ರಾ, ಆಶಾ, ಎಸ್ ಈರೇಶ್, ರುದ್ರೇಶಪ್ಪ, ಸೀನಪ್ಪ, ಚಂದ್ರಮ್ಮ, ನಾಗರತ್ನಮ್ಮ, ಜಯಮ್ಮ, ಲಕ್ಷಮ್ಮ ಸೇರಿ ಮಾನವ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ ಎನ್ ರಾಜು ನೇತೃತ್ವದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.