ಶಿವಮೊಗ್ಗ: ‘ಮುಸ್ಲಿಮರ ಓಲೈಕೆ ಹೀಗೆಯೇ ಮುಂದುವರಿಸಿದರೆ ಜನರು ದಂಗೆ ಏಳುವ ಕಾಲ ದೂರವಿಲ್ಲ. ಕಾಂಗ್ರೆಸ್ಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ’ ಎಂದು ಹೇಳಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.
ಇಲ್ಲಿನ ಜಯನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಮಾಧ್ಯಮಗಳ ವರದಿ ಆಧರಿಸಿ, ಬೇರೆ ಧರ್ಮ ಹಾಗೂ ಪಕ್ಷದವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಎಚ್.ಎಂ. ಸಿದ್ಧೇಗೌಡ ಅವರು ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ, ‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇಸ್ಲಾಮೀಕರಣಕ್ಕೆ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದೂ ಸ್ತಾನವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರಾ? ಎಂದು ಪ್ರಶ್ನಿಸಿದ್ದರು.
ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಶುಕ್ರವಾರ ಸಂಜೆ ಶಿವಮೊಗ್ಗದಲ್ಲಿ ಪ್ರತಿಭಟನೆಯೂ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.