ಹೊಳೆಹೊನ್ನೂರು: ಹೊಳಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರು ಪರವಾನಗಿ ಇಲ್ಲದೇ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ನಿಯಮಾನುಸಾರ ಶಾಲೆಯಿಂದ 100 ಮೀಟರ್ ಅಂತರದೊಳಗೆ ಮದ್ಯ, ಗುಟ್ಕಾ ಮಾರಾಟ ಮಾಡುವಂತಿಲ್ಲ. ಮಾಂಸದ ಅಂಗಡಿ ತೆರಯುವಂತಿಲ್ಲ. ಆದರೂ ಗ್ರಾಮದಲ್ಲಿ ಹಾದುಹೋಗಿರುವ ಶಿವಮೊಗ್ಗ-ಹರಿಹರ ರಸ್ತೆಯ ಅಕ್ಕಪಕ್ಕದಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿಕೊಂಡು ಕೆಲವರು ಮದ್ಯ ಮಾರಾಟ ಮಾಡುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಗ್ರಾಮಾಡಳಿತಕ್ಕೆ ಹಲವು ಸಲ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಮದ್ಯದ ಅಂಗಡಿಗಳಿಂದಾಗಿ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಶೆಡ್‌ಗಳನ್ನು ತೆಗೆಯಿಸಲು ಗ್ರಾಮಾಡಳಿತ ಹಿಂದೇಟು ಹಾಕುತ್ತಿರುವುದು ಏಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.
ಈಗಾಗಲೇ ಸರ್ಕಾರಿ ಶಾಲೆಗಳ ಸ್ಥಿತಿ ಅಧೋಗತಿಗೆ ತಲುಪಿದೆ. ಕೆಲವು ಶಾಲೆಗಳು ಮುಚ್ಚುವ ಹಂತದಲ್ಲಿವೆ. ಹೀಗಿರುವಾಗ ಶಾಲೆಯ ಮುಂದೆಯೇ ಮದ್ಯ ಮಾರಾಟ ಅಂಗಡಿಗಳಿದ್ದರೆ ಯಾವ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಧೈರ್ಯ ಮಾಡುತ್ತಾರೆ. ಬಡವರ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುತ್ತಿದ್ದು, ಮದ್ಯದ ಅಂಗಡಿಗಳ ಕಾರಣದಿಂದ ಮಕ್ಕಳ ಶಿಕ್ಷಣದಿಂದ ವಂಚಿತರಾಗುವಂತಾಗಬಾರದು ಎಂದು ಮನವಿ ಮಾಡಿದ್ದಾರೆ.
ಹೊಳಲೂರು ಸುತ್ತಮುತ್ತಲಿನ ಗ್ರಾಮಗಳ ಕಿರಾಣಿ ಅಂಗಡಿಗಳಲ್ಲಿ ಯಾವ ವಸ್ತು ಸಿಗದಿದ್ದರೂ ಮದ್ಯ ಮಾತ್ರ ಸಿಗುತ್ತದೆ. ಕೆಲವರು ನೆಪಕ್ಕಷ್ಟೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದು, ಮದ್ಯ ಮಾರಾಟ ಮಾಡುತ್ತಾರೆ. ದಿನದ 24 ಗಂಟೆಗಳ ಕಾಲ ಮದ್ಯ ಮಾರಾಟ ಮಾಡುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲಿಸಲು ಮುಂದಾಗಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೊಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ತಿಳಿಸಿದ್ದಾರೆ.
ಶಾಲೆಯ ಎದುರಿನ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಶಾಲಾ ಮಕ್ಕಳು ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ತಕ್ಷಣವೇ ತೆರವುಗೊಳಿಸಬೇಕು.
-ರಂಜಿತಾ ಶಾಲಾ ಸಮಿತಿ ಅಧ್ಯಕ್ಷೆ
ಶಾಲೆಯ ಮುಂಭಾಗದಲ್ಲಿ ಮದ್ಯ ಮಾರಾಟ ಅಂಗಡಿಗಳನ್ನು ಕೂಡಲೇ ತೆರವುಗೊಳಿಸಬೇಕು. ಅಧಿಕಾರಿಗಳು ಜನಪ್ರತಿನಿಧಿಗಳು ಸಾರ್ವಜನಿಕ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಳಬೇಕು . -ಕೃಷ್ಣನಾಯ್ಕ ಗ್ರಾಮಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.