ADVERTISEMENT

ಸಿಗಂದೂರು ಸೇತುವೆಗಾಗಿ ಅನಿಯಮಿತ ಗಣಿ ಸ್ಪೋಟ: ವರದಿಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 13:03 IST
Last Updated 2 ಆಗಸ್ಟ್ 2021, 13:03 IST

ಶಿವಮೊಗ್ಗ: ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಗೆ ಸ್ಥಳೀಯವಾಗಿ ಗಣಿಗಾರಿಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಆ ಸ್ಥಳದಲ್ಲಿ ಅನಿಯಂತ್ರಿತ ಸ್ಫೋಟ ಕುರಿತು ಸ್ಥಳೀಯರಿಂದ ದೂರುಗಳು ದಾಖಲಾಗಿವೆ. ಉಪ ವಿಭಾಗಾಧಿಕಾರಿ ಸ್ಥಳ ಸಮೀಕ್ಷೆ ನಡೆಸಿ ವರದಿ ತಕ್ಷಣ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಪ್ರಮುಖ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಮಾನ ನಿಲ್ದಾಣ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗೆ ಪೂರ್ಣಗೊಳಿಸಬೇಕು. ವಿಮಾನ ನಿಲ್ದಾಣದ ಎಟಿಸಿ ಟವರ್ ನೋಂದಣಿ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಬಾಕಿ ಉಳಿದ ಕಾಂಪೌಂಡ್ ಕೆಲಸ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ಆರಂಭಿಸಬೇಕು ಎಂದರು.

ADVERTISEMENT

ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ 38 ಎಕರೆ ಜಮೀನಿನಲ್ಲಿ ವಸತಿಗಾಗಿ ಲೇಔಟ್ ನಿರ್ಮಿಸಿ, ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತು ಕಂದಾಯ ಇಲಾಖೆ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ತಕ್ಷಣ ಪ್ರಾರಂಭಿಸಬೇಕು. ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಪ್ರಗತಿಯಲ್ಲಿರುವ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಬೇಕು. ಸರ್ಕಾರದ ಹಂತದಲ್ಲಿರುವ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಎಸ್‌ಪಿ ಕಚೇರಿಗೆ ನೂತನ ಕಟ್ಟಡ:ಶಿವಮೊಗ್ಗ ನಗರದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಗುರುತಿಸಲಾಗಿದೆ. ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಟ್ಟಡದ ನಿರ್ಮಾಣಕ್ಕಾಗಿ ₹ 13.70 ಕೋಟಿ ಅಂದಾಜು ಪಟ್ಟಿ ತಯಾರಿಸಲಾಗಿದೆ. ತೇವರಚಟ್ನಳ್ಳಿ ಬಳಿ 9 ಎಕರೆಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೋಮಿನಕೊಪ್ಪ ಪಶು ವೈದ್ಯಕೀಯ ವಿಶ್ವವಿದ್ಯಾಲಯದ 20 ಎಕರೆ ಪ್ರದೇಶದಲ್ಲಿ ಜಿಲ್ಲಾ ಕ್ರೀಡಾ ಸಂಕೀರ್ಣ ಸ್ಥಾಪನೆಗೆ ಖೇಲೊ ಇಂಡಿಯಾಗೆ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ನವುಲೆ ಗ್ರಾಮದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ ಕುರಿತು ದಾಖಲೆಗಳೊಂದಿಗೆ ಪುನಃ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್‌ ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.