ADVERTISEMENT

‘ದೌರ್ಜನ್ಯದಿಂದ ಮುಕ್ತಿ’ ಕಾರ್ಯಕ್ರಮಕ್ಕೆ ಗಾಂಧಿ ಜಯಂತಿ ದಿನ ಚಾಲನೆ

ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 13:18 IST
Last Updated 30 ಸೆಪ್ಟೆಂಬರ್ 2021, 13:18 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಶಿವಮೊಗ್ಗ: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಅರಿವು ಮೂಡಿಸಲು ‘ದೌರ್ಜನ್ಯದಿಂದ ಮುಕ್ತಿ’ ಕಾರ್ಯಕ್ರಮಕ್ಕೆ ಗಾಂಧಿ ಜಯಂತಿ ದಿನ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಅ.2ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ರಾಜ್ಯದ ಎಲ್ಲಾ 6 ಸಾವಿರ ಗ್ರಾಮ ಪಂಚಾಯತಿಗಳಲ್ಲೂ ಶ್ರಮದಾನ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮನೆ ಮನೆಗೆ ನೀರು ಪೂರೈಸುವ ಜಲಜೀವನ್ ಮಿಷನ್ ಕುರಿತು ಮಾಹಿತಿ ನೀಡಲು ಅ.2ರಂದು ಬೆಳಿಗ್ಗೆ 9ರಿಂದ 11ರವರೆಗೆ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಗ್ರಾಮದ ಕುಡಿಯುವ ನೀರು, ನೈರ್ಮಲ್ಯ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರೆ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸುವ ‘ಸಬ್ ಕಿ ಯೋಜನಾ ಸಬ್ ಕಾ ವಿಕಾಸ್’ ಕಾರ್ಯಕ್ರಮವನ್ನು ಮೂರು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಅ.15ರವರೆಗೆ ಕಾರ್ಯ ನಡೆಯಲಿದೆ. ಎಲ್ಲ ಮಾಹಿತಿಂಗಳನ್ನೂ ಮೊಬೈಲ್ ಆ್ಯಪ್‌ಗಳಲ್ಲಿ ದಾಖಲಿಸಲಾಗುವುದು ಎಂದು ವಿವರ ನೀಡಿದರು.

ADVERTISEMENT

ಎರಡನೇ ಹಂತದಲ್ಲಿ ಅ.15ರಿಂದ 30ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಯೋಜನೆಗಳನ್ನು ತಯಾರಿಸಲಾಗುವುದು. ಮೂರನೇ ಹಂತದಲ್ಲಿ ಅನುಮೋದನೆಯಾಗುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುವುದು. ಅಬ್ಬಲಗೇರಿ ಗ್ರಾಮ ಪಂಚಾಯತಿಯಲ್ಲಿ ಅ.2ರಂದು ಬೆಳಿಗ್ಗೆ 8.30ಕ್ಕೆ ಯೋಜನೆಗಳ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯಲ್ಲಿ ವಿವಿಧ ಉದ್ಯಮಗಳನ್ನು ಆರಂಭಿಸಲು ತರಬೇತಿ ಪಡೆದ 270 ಮಹಿಳೆಯರಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.