ADVERTISEMENT

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಕಾಂಗ್ರೆಸ್‌ಗೆ ವರದಾನ: ಬಿ.ಆರ್.ಜಯಂತ್

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 14:24 IST
Last Updated 19 ಮಾರ್ಚ್ 2024, 14:24 IST
ಬಿ.ಆರ್.ಜಯಂತ್
ಬಿ.ಆರ್.ಜಯಂತ್   

ಸಾಗರ: ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಕಾಂಗ್ರೆಸ್‌ಗೆ ವರದಾನವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಆರ್.ಜಯಂತ್ ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿ ಜಾರಿಗೊಳಿಸಿದೆ. ಇದು ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೈ ಹಿಡಿಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

5 ವರ್ಷಗಳ ಹಿಂದೆ ನರೇಂದ್ರ ಮೋದಿಯವರು ಪ್ರಧಾನಿಯಾದಾಗ 5 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, ಇಂದಿಗೂ ವಿದ್ಯಾವಂತ ಯುವಕ ಯುವತಿಯರು ತಮ್ಮ ಅರ್ಹತೆಗೆ ತಕ್ಕ ಉದ್ಯೋಗವಿಲ್ಲದೆ ನರಳುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಹೊಣೆಗೇಡಿ ವರ್ತನೆಯೇ ಕಾರಣ ಎಂದು ಅವರು ಟೀಕಿಸಿದರು.

ADVERTISEMENT

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯದಿಂದಾಗಿ ಇಡೀ ದೇಶ ತಲೆ ತಗ್ಗಿಸುವಂತಾಗಿದೆ. ಅತ್ಯಾಚಾರ ಎಸಗಿದವರನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿಸಲು ಬಿಜೆಪಿ ಮುಖಂಡರು ಮುಂದಾಗಿದ್ದಾರೆ. ಬಿಜೆಪಿ ದುರಾಡಳಿತವನ್ನು ಕೊನೆಗಾಣಿಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅವರ ಗೆಲುವಿಗೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಎಂ.ಖಾಸಿಂ, ಗಣಪತಿ ಮಂಡಗಳಲೆ, ರವಿಕುಮಾರ್ ಗೌಡ, ಚೇತನ್ ರಾಜ್ ಕಣ್ಣೂರು, ಕೆ.ಹೊಳಿಯಪ್ಪ, ಮಹಾಬಲ ಕೌತಿ, ರವಿ ಲಿಂಗನಮಕ್ಕಿ, ಉಮೇಶ್ ನಾಯ್ಕ, ಅಬ್ದುಲ್ ಹಮೀದ್, ಕನ್ನಪ್ಪ ಮುಳಕೇರಿ , ವೆಂಕಟೇಶ್ ಗಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.