ಭದ್ರಾವತಿ: ‘ನಾವು ಆಡುವ ಮಾತುಗಳಿಗೆ ಕೊಲ್ಲುವ ಮತ್ತು ಕಾಪಾಡುವ ಸಾಮರ್ಥ್ಯ ಎರಡು ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆ ಇದ್ದರೆ ಬದುಕು ಬಲಗೊಳ್ಳುತ್ತದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಸಹ್ಯಾದ್ರಿ ಬಡಾವಣೆಯಲ್ಲಿ ಶನಿವಾರ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ಮನುಷ್ಯನ ಮನಸ್ಸು ಸಿರಿವಂತವಾದರೆ ಸಂಪತ್ತು ಇಲ್ಲದಿದ್ದರೂ ನಾವು ಸಿರಿವಂತರೇ. ಮನಸ್ಸೇ ಬಡವಾಗಿದ್ದರೆ ನಮ್ಮಲ್ಲಿ ಸಂಪತ್ತು ಇದ್ದರೂ ನಾವು ಬಡವರಂತೆ. ಸಂತೃಪ್ತಿಗಿಂತ ಶ್ರೇಷ್ಠವಾದ ಸಂಪತ್ತಿಲ್ಲ’ ಎಂದು ಅಭಿಪ್ರಾಯಪಟ್ಟರು.
‘ಸಮಯ, ಸ್ನೇಹ ಮತ್ತು ಆರೋಗ್ಯ ಇವುಗಳಿಗೆ ಬೆಲೆ ಕಟ್ಟಲಾಗದು. ಜೀವನದ ಕೆಟ್ಟ ಘಟನೆಗಳನ್ನು ಮರೆತುಬಿಡಬೇಕು. ಆದರೆ ಅದರಿಂದ ಕಲಿತ ಪಾಠಗಳನ್ನು ಯಾವಾಗಲೂ ಮರೆಯಬಾರದು. ಸುಖ-ದುಃಖಗಳಲ್ಲಿ ಸಮನಾಗಿ ಬಾಳುವುದನ್ನು ಕಲಿಯಬೇಕು’ ಎಂದು ಸಲಹೆ ನೀಡಿದರು.
ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದ ಘೋಷ, ಚನ್ನಗಿರಿ ಶಿವಾಶಾಂತ ವೀರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಪ್ರಾರ್ಥನೆ ಜರುಗಿತು.
ಎಡೆಯೂರು ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಮಳಲಿ ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಮುಖಂಡರಾದ ಹಾಲೇಶ್, ಬಿ.ಕೆ. ಜಗನ್ನಾಥ್ ಪಾಲ್ಗೊಂಡಿದ್ದರು.
ತಾವರೆಕೆರೆ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನಿರೂಪಿಸಿದರು. ಮನು ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.