ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 2,000, ಪ್ರೌಢಶಾಲೆಗಳಿಗೆ 1,500 ಹಾಗೂ ಪದವಿಪೂರ್ವ ಕಾಲೇಜುಗಳಿಗೆ 2,000 ಸೇರಿ ಒಟ್ಟು 5,500 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೊರಬದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಪ್ರೌಢಶಾಲಾ ಮಕ್ಕಳಿಗೆ ಆರಂಭವಾದ ಎರಡು ದಿನಗಳ ರಾಜ್ಯಮಟ್ಟದ ಥ್ರೋ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ನೇಮಕಾತಿ ಪ್ರಕ್ರಿಯೆಗೆ ಹಣಕಾಸು ಇಲಾಖೆಯ ಒಪ್ಪಿಗೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊಂದಿರುವುದರಿಂದ ಶೀಘ್ರ ಅದಕ್ಕೆ ಒಪ್ಪಿಗೆ ದೊರೆಯಲಿದೆ. ನಂತರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ದೈಹಿಕ ಶಿಕ್ಷಣ ಮಾತ್ರವಲ್ಲ, ಚಿತ್ರಕಲಾ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಇಲಾಖೆಗೆ 40 ಸಾವಿರ ಶಿಕ್ಷಕರ ಅಗತ್ಯವಿದ್ದು, ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ರಾಗಿ ಮಾಲ್ಟ್ ವಿತರಣೆ
ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ಕೊಡುವ ಹಾಲಿನ ಜೊತೆಗೆ ರಾಗಿ ಮಾಲ್ಟ್ ಬೆರೆಸಿ ವಿತರಿಸಲು ನಿರ್ಧರಿಸಲಾಗಿದೆ. ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯಿಂದ (ಸಿಎಫ್ಟಿಆರ್ ಐ) ರಾಗಿ ಮಾಲ್ಟ್ ನ ಗುಣಮಟ್ಟದ ಬಗ್ಗೆ ವರದಿ ಪಡೆದ ನಂತರ ಯೋಜನೆ ಜಾರಿಗೊಳ್ಳಲಿದೆ. ರಾಜ್ಯದಲ್ಲಿ 1.80 ಕೋಟಿ ಮಕ್ಕಳು ಇದರ ಲಾಭ ಪಡೆಯಲಿದ್ದಾರೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನ
ರಾಜ್ಯದಲ್ಲಿ ಒಟ್ಟು 3,000 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ. ಇದರಿಂದ ಪ್ರತೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 4ರಿಂದ 6 ಶಾಲೆಗಳ ತೆರೆಯಲು ಅವಕಾಶವಾಗಲಿದೆ ಎಂದು ಹೇಳಿದ ಮಧು ಬಂಗಾರಪ್ಪ, ಈ ಶಾಲೆಗಳಲ್ಲಿ ಎಲ್ ಕೆ.ಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ 14 ವರ್ಷಗಳ ಕಾಲ ಕಲಿಯಲು ಮಕ್ಕಳಿಗೆ ಅವಕಾಶವಾಗಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.