ADVERTISEMENT

ಎಂಪಿಎಂ ಕಾರ್ಖಾನೆ ಸ್ವಾಧೀನಕ್ಕೆ ಮನವಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 14:15 IST
Last Updated 4 ಜುಲೈ 2024, 14:15 IST
ಭದ್ರಾವತಿಯ ಎಂಪಿಎಂ ಕಾರ್ಖಾನೆ
ಭದ್ರಾವತಿಯ ಎಂಪಿಎಂ ಕಾರ್ಖಾನೆ   

ಭದ್ರಾವತಿ: ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ (ಎಂಪಿಎಂ) ಕಾರ್ಖಾನೆಯನ್ನು ರಾಜ್ಯ ಸರ್ಕಾರದಿಂದ ಸ್ವಾಧೀನಪಡಿಸಿಕೊಂಡು ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಟ್ಟಿರುವ ಹಿಂದೂಸ್ಥಾನ್ ಪೇಪರ್ ಕಾರ್ಪೋರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಕೋರಿ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು. 

‘ಮೈಸೂರು ಪೇಪರ್ ಮಿಲ್ಸ್ ಈ ಹಿಂದೆ ಮುದ್ರಣ ಕಾಗದ ತಯಾರಿಕೆ ಹಾಗೂ ನೀರು ಶುದ್ಧೀಕರಣದಲ್ಲಿ ದೇಶದಲ್ಲಿಯೇ ದ್ವಿತೀಯ ಸ್ಥಾನದಲ್ಲಿತ್ತು. ಈ ಹಿಂದಿನ ಸರ್ಕಾರಗಳು ಕಾರ್ಖಾನೆಯನ್ನು ಪುನಶ್ಚೇತನ ಮಾಡದೇ ಸಂಪೂರ್ಣವಾಗಿ ಮುಚ್ಚಿಬಿಟ್ಟಿವೆ. ರಾಜ್ಯ ಸರ್ಕಾರ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಲು ಆಸಕ್ತಿ ಹೊಂದಿಲ್ಲದಿರುವುದು ಕಂಡು ಬರುತ್ತಿದೆ. ಕಾರ್ಖಾನೆ ಸಾವಿರಾರು ಎಕರೆ ಸ್ವಂತ ಜಾಗ ಹೊಂದಿದೆ. ಭದ್ರಾ ನದಿ ತಟದಲ್ಲಿರುವುದರಿಂದ ಕಾರ್ಖಾನೆಯಲ್ಲಿ ವಿದ್ಯುಚ್ಛಕ್ತಿ ಉತ್ಪಾದನೆ ಕೈಗೊಳ್ಳಲು ಹೆಚ್ಚಿನ ಅವಕಾಶವಿದೆ. ಹೀಗಾಗಿ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಲಾಗಿದೆ.

ಜನಸ್ಪಂದನ ಸೇವಾ ಟ್ರಸ್ಟ್ ಅಧ್ಯಕ್ಷ ಆರ್.ವೇಣುಗೋಪಾಲ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಕಾರ್ಯದರ್ಶಿ  ಗಿರಿನಾಯ್ಡು, ಸುವರ್ಣ ಮಹಿಳಾ ವೇದಿಕೆ ಅಧ್ಯಕ್ಷೆ ಎನ್.ಎಲ್ ರಮಾವೆಂಕಟೇಶ್ ಸೇರಿದಂತೆ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.