ADVERTISEMENT

ಸಾಗರ: ನಗರವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಬೇಳೂರು ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 14:17 IST
Last Updated 16 ಅಕ್ಟೋಬರ್ 2024, 14:17 IST
ಸಾಗರ ನಗರಸಭೆ ಕಚೇರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಕುರಿತು ಅಹವಾಲು ಆಲಿಸಿದರು
ಸಾಗರ ನಗರಸಭೆ ಕಚೇರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಕುರಿತು ಅಹವಾಲು ಆಲಿಸಿದರು   

ಸಾಗರ: ನಗರವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆ ಅಧಿಕಾರಿ, ಸಿಬ್ಬಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಲ್ಲಿನ ನಗರಸಭೆ ಕಚೇರಿಗೆ ಬುಧವಾರ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಕುರಿತು ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸ್ವಚ್ಛತೆಗೆ ಸಂಬಂಧಿಸಿದಂತೆ ನಗರದ ಯಾವುದೆ ಭಾಗದ ಸಾರ್ವಜನಿಕರಿಂದ ದೂರು ಬಾರದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. 

ಈ ವರ್ಷ ಬಿಟ್ಟೂಬಿಡದೆ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಎಲ್ಲೆಡೆ ರಸ್ತೆಯಲ್ಲಿ ಹೊಂಡ ಗುಂಡಿಗಳು ಕಂಡುಬಂದಿದ್ದು, ಮಳೆ ಕಡಿಮೆಯಾಗುತ್ತಿದ್ದಂತೆಯೇ ಅವುಗಳನ್ನು ಮುಚ್ಚುವ ಕೆಲಸ ಆಗಬೇಕು ಎಂದು ಅವರು ಸೂಚನೆ ನೀಡಿದರು.

ADVERTISEMENT

ಆಶ್ರಯ ನಿವೇಶನ ಕೋರಿ 4,000ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈಗ ಹಂಚಿಕೆಗೆ ಅಂದಾಜು 2,000ದಷ್ಟು ನಿವೇಶನಗಳು ಇವೆ. ಶೀಘ್ರದಲ್ಲೆ ನಗರ ಆಶ್ರಯ ಸಮಿತಿ ಅಸ್ತಿತ್ವಕ್ಕೆ ಬರಲಿದ್ದು ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಸ್ವತ್ತುಗಳ ಮಾರಾಟಕ್ಕೆ, ಸ್ವತ್ತುಗಳ ಮೇಲೆ ಸಾಲ ತೆಗೆಯಲು, ಅಡಮಾನ ಮಾಡಲು ಇ-ಸ್ವತ್ತು ದಾಖಲೆ ನೀಡುವುದು ಕಡ್ಡಾಯ ಎಂಬ ಆದೇಶವನ್ನು ಸರ್ಕಾರ ಹೊರಡಿಸಿದೆ. ಸ್ವತ್ತುಗಳ ಮಾಲಿಕರು ತಮ್ಮ ಆಸ್ತಿಯನ್ನು ಇ-ಸ್ವತ್ತು ತಂತ್ರಾಂಶಕ್ಕೆ ಅಳವಡಿಸಲು ಬಂದಾಗ ಅವರನ್ನು ಸತಾಯಿಸದೆ ಸಾಧ್ಯವಾದಷ್ಟು ಶೀಘ್ರವಾಗಿ ಕೆಲಸ ಮಾಡಿಕೊಡಬೇಕು ಎಂದು ಅವರು ಸೂಚನೆ ನೀಡಿದರು.

ನಗರಸಭೆ ಸದಸ್ಯರಾದ ಮಧು ಮಾಲತಿ, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಎನ್.ಲಲಿತಮ್ಮ, ಎಲ್.ಚಂದ್ರಪ್ಪ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪರಿಸರ ಅಭಿಯಂತರ ಮದನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.