ಶಿವಮೊಗ್ಗ: ಲಾಕ್‌ಡೌನ್ ಮಧ್ಯೆಯೂ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಏಳೆಂಟು ತಿಂಗಳ ಒಳಗೆ ಉದ್ಘಾಟನೆಯಾಗುವ ಭರವಸೆ ಇದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಈಗಾಗಲೇ ಶೇ 50ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಹಲವು ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ ಕಾಮಗಾರಿಗೆ ಸ್ವಲ್ಪ ಹಿನ್ನಡೆಯಾಗಿದೆ. ಮತ್ತೆ ಕಾಮಗಾರಿ ವೇಗ ಪಡೆದಿದೆ. ಕಾಮಗಾರಿಗೆ ಇದ್ದ ಎಲ್ಲ ತೊಡಕುಗಳು ನಿವಾರಣೆಯಾಗಿವೆ. ಅಲ್ಲಿನ ಬೃಹತ್ ವಿದ್ಯುತ್ ಮಾರ್ಗ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ₹ 22 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ವಿಮಾನ ನಿಲ್ದಾಣ ಪ್ರಾರಂಭವಾದರೆ ಮಧ್ಯ ಕರ್ನಾಟಕಕ್ಕೆ ಸಾಕಷ್ಟು ಅನುಕೂಲವಾಗಲಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ರಾಜ್ಯ ಸರಕಾರ ಈಗಾಗಲೇ ಸೂಚನೆ ನೀಡಿದೆ. ಕಾಮಗಾರಿಗೆ ಅಗತ್ಯವಾದ ಹಣ ಬಿಡುಗಡೆ ಮಾಡಿದೆ ಎಂದು ವಿವರ ನೀಡಿದರು.
ಮೇಯರ್ ಸುನೀತಾ ಅಣ್ಣಪ್ಪ, ‘ಸೂಡಾ’ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಕೆಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಬಿಜೆಪಿ ಮುಖಂಡ ಕೆ.ವಿ. ಅಣ್ಣಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.