ADVERTISEMENT

ಶಿವಮೊಗ್ಗ | ಟಿಇಟಿ ಪರೀಕ್ಷೆ 30ಕ್ಕೆ: ಸಿದ್ಧತೆಗೆ ಸೂಚನೆ

ಅಧಿಕಾರಿಗಳ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 15:47 IST
Last Updated 26 ಜೂನ್ 2024, 15:47 IST
ಶಿವಮೊಗ್ಗದಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳೊಂದಿಗೆ ಟಿಇಟಿ ಪರೀಕ್ಷೆ ಸಿದ್ಧತೆ ಕುರಿತು ಸಭೆ ನಡೆಸಿದರು
ಶಿವಮೊಗ್ಗದಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳೊಂದಿಗೆ ಟಿಇಟಿ ಪರೀಕ್ಷೆ ಸಿದ್ಧತೆ ಕುರಿತು ಸಭೆ ನಡೆಸಿದರು   

ಶಿವಮೊಗ್ಗ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂನ್ 30ರಂದು ನಗರದಲ್ಲಿ ನಡೆಯಲಿದೆ. ಪರೀಕ್ಷೆ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷೆ ಕುರಿತು ಬುಧವಾರ ಪೂರ್ವಸಿದ್ಧತಾ ಸಭೆ ನಡೆಸಿದರು.

ಅಂದು ಬೆಳಿಗ್ಗೆ 9.30ರಿಂದ 12ರವರೆಗೆ ಪತ್ರಿಕೆ-1, ಮಧ್ಯಾಹ್ನ 2 ರಿಂದ 4.30 ರವರೆಗೆ ಪತ್ರಿಕೆ 2 ಪರೀಕ್ಷೆ ನಡೆಯಲಿದೆ. 11 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-1 ಹಾಗೂ 17 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ADVERTISEMENT

ಮೊದಲನೇ ಅವಧಿಯಲ್ಲಿ 2874 ಮತ್ತು ಎರಡನೇ ಅವಧಿಯಲ್ಲಿ 4676 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈಗಾಗಲೇ ಕೇಂದ್ರ ಸ್ಥಾನಿಕ ಜಾಗೃತದಳ, ಮಾರ್ಗಾಧಿಕಾರಿಗಳು, ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಮತ್ತು ಇತರೆ ಸಿಬ್ಬಂದಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪರೀಕ್ಷೆ ಅವಧಿಯಲ್ಲಿ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶ ನಿಷೇಧಿತ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.

ಪರೀಕ್ಷಾ ಪ್ರಕ್ರಿಯೆ ಸಂಪೂರ್ಣ ವಿಡಿಯೊ ಚಿತ್ರೀಕರಣ ಮಾಡಿಸಬೇಕು. ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಮಳೆಗಾಲವಾದ್ದರಿಂದ ಪರೀಕ್ಷೆ ಮುನ್ನ ಕೊಠಡಿಗಳ ಸ್ಥಿತಿಗತಿ ಪರಿಶೀಲಿಸಬೇಕು. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಇರುವಂತೆ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ಅಭ್ಯರ್ಥಿಗಳು ಯಾವುದಾದರೂ ಒಂದು ಗುರುತಿನ ಚೀಟಿ ಕಡ್ಡಾಯವಾಗಿ ಪರೀಕ್ಷಾ ಕೇಂದ್ರಕ್ಕೆ ತರಬೇಕು. ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಬರಬೇಕು. ಮೊಬೈಲ್ ಫೋನ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿಲ್ಲ. ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರಗಳಿಗೆ ಬಿಡಲು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಅಭ್ಯರ್ಥಿಗಳು ಗುಂಪುಗೂಡದಂತೆ ಪರೀಕ್ಷಾ ಕೇಂದ್ರದ ಹೊರಗಡೆ 2-3 ಕಡೆಗಳಲ್ಲಿ ನೋಂದಣಿ ಸಂಖ್ಯೆ, ಕೊಠಡಿ ಸಂಖ್ಯೆ ಸಂಖ್ಯೆ ಪ್ರಕಟಿಸಬೇಕು. ದೃಷ್ಟಿದೋಷವುಳ್ಳವರು ಮತ್ತು ಅಂಗವಿಕಲರಿಗೆ ಸೌಲಭ್ಯಗಳ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷೆಗೆ ನಿಯೋಜಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿ  ತಮಗೆ ನೀಡಲಾದ ಮಾರ್ಗಸೂಚಿಗಳ ಅನುಸರಿಸಿ, ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು.

ಕೇಂದ್ರ ಸ್ಥಾನಿಕ ಜಾಗೃತ ದಳ, ಮಾರ್ಗಾಧಿಕಾರಿಗಳು, ಅಧೀಕ್ಷಕರು ಮತ್ತು ಪರೀಕ್ಷಾ ನಿಯೋಜಿತ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿ ಮತ್ತು ಪರೀಕ್ಷಾ ಪ್ರಕ್ರಿಯೆ ಕುರಿತು ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ  ಮಾಹಿತಿ ನೀಡಿದರು.

ಸಭೆಯಲ್ಲಿ ಡಯಟ್ ಪ್ರಾಂಶುಪಾಲ  ಬಸವರಾಜ್, ಶಿಕ್ಷಣಾಧಿಕಾರಿ ಲೋಕೇಶಪ್ಪ ಪಾಲ್ಗೊಂಡಿದ್ದರು.

ಒಟ್ಟು ಅಭ್ಯರ್ಥಿಗಳು: 4676 ಪರೀಕ್ಷಾ ಕೇಂದ್ರಗಳ ಸಂಖ್ಯೆ: 17 ಎರಡು ಅವಧಿಯಲ್ಲಿ ಪರೀಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.