ಶಿವಮೊಗ್ಗ: ದೆಹಲಿಯ ಜೆಎನ್‌ಯುನಲ್ಲಿ ಭಾನುವಾರ ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಲ್ಲಾ ಎನ್ಎಸ್‌ಯುಐ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿಚಾರಗಳನ್ನು ವಿರೋಧಿಸಿ ಜೆಎನ್‌ಯುನಲ್ಲಿ ಎರಡು ತಿಂಗಳಿನಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಟ್ಟುಕೊಂಡು ಹಲ್ಲೆ ನಡೆಸಿರುವುದು ಖಂಡನೀಯ ಎಂದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಬಿವಿಪಿ ಸಂಘಟನೆಯ ಮುಖಂಡರು, ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಇವರಿಗೆ ಬಿಜೆಪಿ ಮತ್ತು ಸಂಘ ಪರಿವಾರದವರ ಬೆಂಬಲವೂ ಇದೆ. ಜೆಎನ್‌ಯುನಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ದೂರಿದರು.
ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಜೆಎನ್‍ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಆಯಿಷಿ ಘೋಷ್ ಮತ್ತಿತರರಿಗೆ ಚಿಕಿತ್ಸೆ ನೀಡಿ ರಕ್ಷಣೆ ಒದಗಿಸಬೇಕು. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಕೂಡಲೇ ರಾಷ್ಟ್ರಪತಿ ಮಧ್ಯೆ ಪ್ರವೇಶಿಸಿ, ಪ್ರತಿಭಟನಾನಿರತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಪ್ರಮುಖರಾದ ಚೇತನ್, ಕೆ. ಬಾಲಾಜಿ, ವಿನಯ್, ವಿಜಯ್, ರವಿ, ಪ್ರದೀಪ್, ರಘು, ನಿತೀನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.