ಶಿವಮೊಗ್ಗ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭೇಟಿ ನೀಡಿದರು.
ಈ ವೇಳೆ ಅಧಿಕಾರಿಗಳೊಂದಿಗೆ ಸೇರಿ ಕಾರ್ಖಾನೆಯ ವಿವಿಧ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರ ಸಚಿವರ ಭೇಟಿ ಕಾರ್ಖಾನೆಯ ಪುನಶ್ಚೇತನದ ವಿಚಾರದಲ್ಲಿ ಉಕ್ಕಿನ ನಗರಿ ಭದ್ರಾವತಿ ಜನರ ನಿರೀಕ್ಷೆಯ ಗರಿಗೆದರಿಸಿದೆ.
ಕಾರ್ಮಿಕರು ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಖಾನೆಯ ಮುಖ್ಯ ಗೇಟ್ ಹೊರಭಾಗದಲ್ಲಿ ನೆರೆದಿದ್ದಾರೆ.
ಕಾರ್ಖಾನೆಯ ವೀಕ್ಷಣೆ ವೇಳೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ ಹಾಗೂ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಾಥ್ ನೀಡಿದರು.
ನಂತರ ವಿಐಎಸ್‌ಎಲ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿ (ಇಸ್ಪಾತ್ ಭವನ) ಅಧಿಕಾರಿಗಳು, ಕಾರ್ಮಿಕ ಮುಖಂಡರು ಹಾಗೂ ಈ ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಸಭೆಗೆ ಮಾಧ್ಯಮದವರ ಪ್ರವೇಶ ನಿರ್ಬಂಧಿಸಲಾಗಿದೆ.
ಮಾನ್ಯ ಸಚಿವರ ಜತೆ ಭಾರತ ಉಕ್ಕು ಪ್ರಾಧಿಕಾರ (SAIL) ಅಧ್ಯಕ್ಷ ಅಮರೆಂದು ಪ್ರಕಾಶ್ ಸೇರಿದಂತೆ ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳು ಇರಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.