ಶಿವಮೊಗ್ಗ: ‘ಕಾಂಗ್ರೆಸ್ ಪಕ್ಷಕ್ಕೆ ಗುರುವಾರ ಸೇರ್ಪಡೆಯಾಗುತ್ತೇನೆ’ ಎಂದು ಜೆಡಿಎಸ್ ಮುಖಂಡ, ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ನಾನು ಪಕ್ಷ ಸೇರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾರ್ಯಕ್ರಮ ನಿಗದಿಯಾಗಿದೆ’ ಎಂದರು.
‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆ. ಆದರೆ ಜೆಡಿಎಸ್‌ನಿಂದ ಅವಕಾಶ ಸಿಕ್ಕಿದ್ದರಿಂದ ಸ್ಪರ್ಧೆ ಮಾಡಿದ್ದೆ’ ಎಂದು ತಿಳಿಸಿದರು.
‘ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ಗೆ ಸೇರುತ್ತಿದ್ದೇವೆ. ಪಕ್ಷ ಅವಕಾಶ ನೀಡಿದರೆ ವಿಧಾನ ಪರಿಷತ್‌ನ ಪದವೀಧರರ ಕ್ಷೇತ್ರದಿಂದ ಅಥವಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ’ ಎಂದರು.
‘ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೀಶ್ ಸೇರಿದಂತೆ ಕೆಲವರು ನಾನು ಪಕ್ಷ ಸೇರುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅದು ಸಹಜ. ಶೇ 99ರಷ್ಟು ಮುಖಂಡರು ಹಾಗೂ ಕಾರ್ಯಕರ್ತರು ನನ್ನನ್ನು ಸ್ವಾಗತಿಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.