ತುಮಕೂರು: ‘ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಧಾನ ಮಂತ್ರಿಗಳ 15 ಅಂಶಗಳ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
‘ಗುಬ್ಬಿ ಹಾಗೂ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 114 ಅಲ್ಪಸಂಖ್ಯಾತರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಹೊರಗುಳಿದ ಮಕ್ಕಳನ್ನು ವಿಶೇಷ ದಾಖಲಾತಿ ಆಂದೋಲನದಡಿಯಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಿ ಶಾಲೆಗೆ ದಾಖಲಿಸಬೇಕು. ತಂದೆ ತಾಯಿಗೆ ಮಕ್ಕಳ ಭವಿಷ್ಯದ ಬಗ್ಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.
‘ಉರ್ದು ಶಾಲೆಗಳಿಗೆ ಅವಶ್ಯಕತೆಯಿರುವ ಶೌಚಾಲಯ, ಶಾಲಾ ಕಟ್ಟಡ ಸಾಮಗ್ರಿಗಳು, ಆವರಣ ಗೋಡೆ ಹಾಗೂ ಗ್ರಂಥಾಲಯದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಒಟ್ಟು 228 ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಿದ್ದು, ಈ ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ಕೊರತೆಯಾಗದಂತೆ ಪೂರೈಸಬೇಕು. ಸಂಬಂಧಪಟ್ಟ ಮೇಲ್ವಿಚಾರಕರು ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಮಕ್ಕಳ ಮನೆ-ಮನೆಗೆ ತೆರಳಿ ಅಪೌಷ್ಟಿಕತೆ ಬಗ್ಗೆ ತಿಳಿದು ತಮಗೆ ವರದಿ ಸಲ್ಲಿಸಬೇಕು. ಅಪೌಷ್ಟಿಕತೆ ಮಕ್ಕಳ ಬಗ್ಗೆ ವರದಿಯಾದರೆ ಆಯಾ ಮೇಲ್ವಿಚಾರಕರನ್ನೇ ಹೊಣೆಗಾರರನ್ನಾಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ತಲುಪಿಸುವ ದಿಶೆಯಲ್ಲಿ ಕೈಗೊಂಡ ಕ್ರಮಗಳನ್ನು ವಿವರಿಸಿದರು.
15 ಅಂಶಗಳ ಸಮಿತಿ ಸದಸ್ಯ ಖದೀರ್ ಅಹಮ್ಮದ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ರಘು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.