ತುಮಕೂರು: ದೇಶದಲ್ಲಿ ಕಳೆದ 5 ವರ್ಷದಲ್ಲಿ 27 ಸಾವಿರ ಮಕ್ಕಳು ನಾಪತ್ತೆಯಾಗಿದ್ದಾರೆ. ಮಕ್ಕಳ ಕಳ್ಳ ಸಾಗಾಣಿಕೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಆತಂಕ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದ ಅತಿ ದೊಡ್ಡ ಸಮಸ್ಯೆಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಒಂದು. ಇಂತಹ ಸಾಮಾಜಿಕ ಕೃತ್ಯ ತಡೆಗಟ್ಟಲು ಪ್ರತಿ 3 ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸಿ, ಚರ್ಚಿಸಬೇಕು. ಗ್ರಾಮೀಣ ಭಾಗದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.
ಜಿ.ಪಂ ಸಿಇಒ ಜಿ.ಪ್ರಭು, ‘ಬೀದಿ ದೀಪಗಳ ಕೆಳಗೆ ಕೂತು ಓದಿ, ಸಾಧನೆ ಮಾಡಿದ ಅನೇಕ ಸಾಧಕರಿದ್ದಾರೆ. ಅವರ ಬಗ್ಗೆ ಹಾಗೂ ಮಹಿಳಾ ಸಾಧಕರ ಬಗ್ಗೆ ಶಾಲೆಗಳಲ್ಲಿ ಮಕ್ಕಳಿಗೆ ತಿಳಿಸಬೇಕು. ಮಕ್ಕಳ ರಕ್ಷಣಾ ಕಾವಲು ಸಮಿತಿ ತಳ ಮಟ್ಟದಲ್ಲಿ ಕೆಲಸ ಮಾಡಬೇಕು. ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ‘ಬಡ ಕುಟುಂಬಗಳಿಗೆ ಆಸೆ–ಆಮಿಷ ತೋರಿಸಿ ಮಹಿಳೆಯರನ್ನು ವೇಶ್ಯಾವಾಟಿಕೆ, ಅನೈತಿಕ ವ್ಯವಹಾರಗಳಿಗೆ ಬಳಸಿಕೊಳ್ಳುತ್ತಿರುವುದು ಜಾಸ್ತಿಯಾಗುತ್ತಿದೆ. ಮಹಿಳೆಯರು ಸಾಮಾಜಿಕ ಜಾಲ ತಾಣಗಳಿಗೆ ಮರುಳಾಗಿ ಪೂರ್ವಪರ ವಿಚಾರ ಮಾಡದೆ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಜಾಲಕ್ಕೆ ಸಿಲುಕಿ ತಮ್ಮನ್ನು ತಾವೇ ಶೋಷಣೆಗೆ ಅರ್ಪಿಸಿಕೊಳ್ಳುತ್ತಿದ್ದಾರೆ’ ಎಂದು ಎಚ್ಚರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಆರ್.ಜಿ.ಪವಿತ್ರಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಿ.ಅನುಷಾ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಶಿವಣ್ಣ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಎಸ್.ನಂದಕುಮಾರ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.