ತುಮಕೂರು: ‘ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ 350 ಪ್ರಕರಣ ದಾಖಲಾಗಿದ್ದು, 331 ಪ್ರಕರಣ ಇತ್ಯರ್ಥವಾಗಿವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು ಮಾಹಿತಿ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, ‘ವರದಕ್ಷಿಣೆ ನಿಷೇಧ ಕಾಯ್ದೆಯಡಿ ಜನವರಿಯಿಂದ ಜೂನ್ ವರೆಗೆ ಒಟ್ಟು 63 ಪ್ರಕರಣ ದಾಖಲಾಗಿವೆ. 25 ವಿಲೇವಾರಿಯಾಗಿದ್ದು, 38 ಪ್ರಕರಣಗಳು ಬಾಕಿ ಇವೆ. ‘ಸಖಿ’ ಕೇಂದ್ರದಲ್ಲಿ 154 ಪ್ರಕರಣಗಳು ವರದಿಯಾಗಿವೆ’ ಎಂದು ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ‘ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಕಳೆದ ಮೂರು ತಿಂಗಳಲ್ಲಿ 4,767 ಫಲಾನುಭವಿಗಳಿಗೆ ಮಾತ್ರ ಪೌಷ್ಟಿಕ ಆಹಾರ ನೀಡಲಾಗಿದೆ. ಗುರಿ ಸಾಧನೆಯಲ್ಲಿ ಹಿಂದುಳಿದ ಶಿರಾ, ತುಮಕೂರು ತಾಲ್ಲೂಕಿನಲ್ಲಿ ಒಂದು ವಾರದಲ್ಲಿ ನಿಗದಿ ಗುರಿ ತಲುಪಬೇಕು. ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಮರಿಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರಾ, ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.