ADVERTISEMENT

ಮಕ್ಕಳ ನೇತ್ರ ಚಿಕಿತ್ಸೆಗಾಗಿ ಒಡಂಬಡಿಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 5:59 IST
Last Updated 12 ಜೂನ್ 2024, 5:59 IST

ತುಮಕೂರು: ಮಕ್ಕಳಿಗೆ ಉಚಿತವಾಗಿ ನೇತ್ರ ಚಿಕಿತ್ಸೆ ಸೌಲಭ್ಯ ಒದಗಿಸುವ ಸಲುವಾಗಿ ಶ್ರೀದೇವಿ ವೈದ್ಯಕೀಯ ಕಾಲೇಜು, ಪಾವಗಡದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಬೆಂಗಳೂರಿನ ನಯೋನಿಕಾ ಕಣ್ಣಿನ ಚಿಕಿತ್ಸಾ ಯೋಜನೆ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಡಂಬಡಿಕೆ ಮಾಡಿಕೊಂಡಿವೆ.

ಈ ಆರೋಗ್ಯ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಜೂನ್ 12ರಂದು ಬೆಳಗ್ಗೆ 11 ಗಂಟೆಗೆ ಶ್ರೀದೇವಿ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಸುಮಾರು 65 ಲಕ್ಷ ಮಕ್ಕಳು ಕಣ್ಣಿನ ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಅದರಲ್ಲಿ ಶೇ 7.5ರಷ್ಟು ಮಕ್ಕಳಲ್ಲಿ ದೃಷ್ಟಿ ದೋಷ ಕಂಡು ಬಂದಿದೆ. ಇಂತಹ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ, ಕನ್ನಡಕ ನೀಡುವ ಸಲುವಾಗಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಪಾವಗಡ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಸ್ವಾಮಿ ಜಪಾನಂದ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ADVERTISEMENT

ಶ್ರೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ‘ಇನ್ನು ಮುಂದೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡುವ ಜವಾಬ್ದಾರಿಯನ್ನು ಶ್ರೀದೇವಿ ಆಸ್ಪತ್ರೆ ತೆಗೆದುಕೊಳ್ಳಲಿದೆ. ಆಸ್ಪತ್ರೆಯಲ್ಲಿ ತಜ್ಞ ವೈದ್ಯರು, ಅಗತ್ಯ ಸೌಲಭ್ಯಗಳಿವೆ. ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಲಭ್ಯವಾಗಲಿವೆ’ ಎಂದು ತಿಳಿಸಿದರು.

ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ಎಂ.ರಮಣ್, ‘ಶಿಕ್ಷಕರಿಗೆ ಕೆಲವು ತರಬೇತಿ ನೀಡಿ, ವಿಷನ್ ಚಾರ್ಟ್ ಕೊಡಲಾಗುವುದು. ಮಕ್ಕಳು ಕೆಲವು ಅಕ್ಷರಗಳನ್ನು ಓದಲು ಕಷ್ಟಕರವಾದಾಗ ಈ ಚಾರ್ಟ್ ಬಳಸಿ ದೋಷ ಕಂಡುಹಿಡಿದು ನಮಗೆ ತಿಳಿಸಲಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿ, ಚಿಕಿತ್ಸೆ ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.