ADVERTISEMENT

ತುಮಕೂರು: 17 ಹೊಸ ಕೊಳವೆ ಬಾವಿ ಕೊರೆಸಲು ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 10 ಮೇ 2024, 4:47 IST
Last Updated 10 ಮೇ 2024, 4:47 IST
ಜಿ.ಪ್ರಭು
ಜಿ.ಪ್ರಭು   

ತುಮಕೂರು: ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಚಿಕ್ಕನಾಯಕನಹಳ್ಳಿ, ಮಧುಗಿರಿ, ಕೊರಟಗೆರೆ, ಶಿರಾ ತಾಲ್ಲೂಕಿನ 17 ಗ್ರಾಮಗಳಲ್ಲಿ ₹46.17 ಲಕ್ಷ ವೆಚ್ಚದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ಅನುಮೋದನೆ ನೀಡಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧ್ಯಕ್ಷತೆಯಲ್ಲಿ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಕೊಳವೆ ಬಾವಿ ಕೊರೆಸಲು ಒಪ್ಪಿಗೆ ನೀಡಲಾಯಿತು. ಜಿಲ್ಲೆಯ ಎಲ್ಲಾ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಹೊಸ ಕೊಳವೆ ಬಾವಿ ಕೊರೆಯುವ ಮುನ್ನ ನೀರಿನ ಮೂಲವಿರುವ ಕಡೆ ವೈಜ್ಞಾನಿಕವಾಗಿ ಜಲಬಿಂದು ಗುರುತಿಸಬೇಕು. ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿರುವ, ನೀರಿನ ಪ್ರಮಾಣ ಕಡಿಮೆಯಾಗಿರುವ ಜನವಸತಿ ಪ್ರದೇಶಗಳಲ್ಲಿ ಮಾತ್ರ ಹೊಸದಾಗಿ ಇನ್ನೆರಡು ದಿನಗಳಲ್ಲಿ ಕೊಳವೆ ಬಾವಿ ಕೊರೆಸಬೇಕು. ಈಗಾಗಲೇ ಹಲವಾರು ಕೊಳವೆ ಬಾವಿ ವಿಫಲವಾಗಿರುವ ಜನವಸತಿ ಪ್ರದೇಶಗಳಲ್ಲಿ ಹೊಸದಾಗಿ ಕೊರೆಸುವುದು ಸೂಕ್ತವಲ್ಲ ಎಂದು ಸಲಹೆ ನೀಡಿದರು.

ADVERTISEMENT

ಹಿಂದಿನ ಸಭೆಯಲ್ಲಿ ಕುಡಿಯುವ ನೀರಿನ ಜಲಮೂಲಗಳನ್ನು ಸ್ವಚ್ಛಗೊಳಿಸಿ ವರದಿ ನೀಡಲು ಸೂಚಿಸಲಾಗಿತ್ತು. ಈ ಬಗ್ಗೆ ಕೂಡಲೇ ಪಿಡಿಒಗಳು ಕಾರ್ಯನಿರ್ವಾಹಕಾಧಿಕಾರಿ ಮೂಲಕ ದೃಢೀಕರಣ ಪತ್ರವನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಸಮಸ್ಯಾತ್ಮಕ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಪಡೆದು ಪೂರೈಕೆ ಮಾಡಲು ಆದ್ಯತೆ ನೀಡಬೇಕು. ಖಾಸಗಿ ಕೊಳವೆ ಬಾವಿ ದೊರೆಯದಿದ್ದಲ್ಲಿ ಹೊಸದಾಗಿ ಕೊರೆಸಬೇಕು. ನೀರಿನ ಸಮಸ್ಯೆ ಕಂಡುಬಂದ ಗ್ರಾಮಗಳಿಗೆ ತುರ್ತು ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ದರ ನಿಗದಿಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾರ್ಯಾದೇಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರವೀಶ್ ಮತ್ತಿತರರು ಹಾಜರಿದ್ದರು.

ಎಲ್ಲೆಲ್ಲಿ ಕೊಳವೆ ಬಾವಿ
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬಡಕೆಗುಡ್ಲು ಕಾರೇನಹಳ್ಳಿ ಭೀಮಸಂದ್ರ ರಾಯಪ್ಪನಹಟ್ಟಿ ಕಂದಿಕೆರೆ. ಮಧುಗಿರಿ ತಾಲ್ಲೂಕಿನ ಮಲ್ಲನಾಯಕನಹಳ್ಳಿ ಭಕ್ತರಹಳ್ಳಿ ಪುಲಮಾಚಿ. ಕೊರಟಗೆರೆ ತಾಲ್ಲೂಕಿನ ತುಂಬಾಡಿ. ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದ 1ನೇ ಬ್ಲಾಕ್ ಹುಣಸೇಕಟ್ಟೆ ತಾವರೇಕೆರೆ ಭೋವಿ ಕಾಲೊನಿ ರಾಮನಹಳ್ಳಿ ಗಜಮಾರನಹಳ್ಳಿ ದೇವರಹಳ್ಳಿ ಸೋರೆಕುಂಟೆ ಹುಯಿಲ್‍ದೊರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.