ADVERTISEMENT

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2023, 17:05 IST
Last Updated 11 ಡಿಸೆಂಬರ್ 2023, 17:05 IST
ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ತುಮಕೂರಿನ ಬಿಜಿಎಸ್ ವೃತ್ತದಲ್ಲಿ ಸೋಮವಾರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು
ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ತುಮಕೂರಿನ ಬಿಜಿಎಸ್ ವೃತ್ತದಲ್ಲಿ ಸೋಮವಾರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು   

ತುಮಕೂರು: ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರೊಬ್ಬರಿಂದ ₹350 ಕೋಟಿಗೂ ಹೆಚ್ಚು ಹಣ ವಶಪಡಿಸಿಕೊಂಡಿರುವುದನ್ನು ಗಮನಿಸಿದರೆ ಆ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ನಗರದ ಬಿಜಿಎಸ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಚುನಾವಣೆ ಗೆಲ್ಲುವ ಉದ್ದೇಶದಿಂದ ಹಣ ಸಂಗ್ರಹಿಸುವಲ್ಲಿ ಕಾಂಗ್ರೆಸ್ ನಾಯಕರು ತೊಡಗಿದ್ದಾರೆ. ಸಂಸದರೊಬ್ಬರಿಂದ ₹350 ಕೋಟಿಗೂ ಹೆಚ್ಚು ಹಣ ವಶಪಡಿಸಿಕೊಂಡಿದ್ದು, ಮೂರು ದಿನಗಳು ಕಳೆದರೂ ಎಣಿಕೆ ಮುಗಿಯುತ್ತಿಲ್ಲ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಕಾರ್ಖಾನೆಯಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ರಾಜ್ಯ ಸರ್ಕಾರದಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಬರದಿಂದ ತತ್ತರಿಸಿರುವ ರೈತರ ನೆರವಿಗೆ ಬರಬೇಕಾದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೇಂದ್ರ ಸರ್ಕಾರ ನೀಡುವ ಪಡಿತರದಲ್ಲೂ ಭ್ರಷ್ಟಾಚಾರ ನಡೆದಿದೆ. ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿಲ್ಲ ಎಂದು ಟೀಕಿಸಿದರು.

ADVERTISEMENT

ಕಾಂಗ್ರೆಸ್‍ನ ಭ್ರಷ್ಟಾಚಾರದ ಹಣವನ್ನು ಹೊರ ತೆಗೆಯಬೇಕು. ಅಕ್ರಮವಾಗಿ ಹಣ ಸಂಗ್ರಹಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಿದರೆ ದೇಶದಲ್ಲಿ ಭ್ರಷ್ಟಾಚಾರ ಮುಕ್ತವಾಗುತ್ತದೆ ಎಂದು ಲೇವಡಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್.ರವಿಶಂಕರ್, ಮುಖಂಡರಾದ ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಬಿ.ನಂದೀಶ್, ವೈ.ಎಸ್.ಹುಚ್ಚಯ್ಯ, ದಿಲೀಪ್ ಕುಮಾರ್, ಎಚ್.ಟಿ.ಭೈರಪ್ಪ. ಡಾ.ಪರಮೇಶ್, ವಿನಯ್ ಬಿದರೆ, ಎಚ್.ಟಿ.ಚಂದ್ರಶೇಖರ್, ಬಾವಿಕಟ್ಟೆ ನಾಗಣ್ಣ, ಅಂಬಿಕಾ ಹುಲಿನಾಯ್ಕರ್, ಸಂದೀಪ್ ಗೌಡ, ಯಶಸ್, ಜಗದೀಶ್, ರುದ್ರೇಶ್, ಪ್ರೇಮಾ ಹೆಗಡೆ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.