ADVERTISEMENT

ತುಮಕೂರು | ಚಿನ್ನೇನಹಳ್ಳಿಯಲ್ಲಿ ಆತಂಕ ಮೂಡಿಸಿದ ಕಾಲರಾ

ಒಂದು ಕಾಲರಾ ಪ್ರಕರಣ ದೃಢ, ಐಸಿಯುನಲ್ಲಿ 15 ಜನರಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 2:58 IST
Last Updated 17 ಜೂನ್ 2024, 2:58 IST
ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ
ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ   

ತುಮಕೂರು: ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆದವರ ಪೈಕಿ ಒಬ್ಬರಲ್ಲಿ ಕಾಲರಾ ಸೋಂಕು ಇರುವುದು ಖಚಿತ ಪಟ್ಟಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಜೂನ್‌ 10ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣಪ್ಪ (32) ಎಂಬುವರಲ್ಲಿ ಸೋಂಕು ಕಾಣಿಸಿಕೊಂಡಿದೆ. ‘ಇವರು ಸದ್ಯ ದಾಬಸ್‌ಪೇಟೆಯ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಆರೋಗ್ಯವಾಗಿದ್ದಾರೆ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುವರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಪ್ರಸ್ತುತ ಜಿಲ್ಲಾ ಆಸ್ಪತ್ರೆಯಲ್ಲಿ 2, ಮಧುಗಿರಿಯಲ್ಲಿ 12 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 15 ಮಂದಿ ದಾಖಲಾಗಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. 12 ಜನರ ಆರೋಗ್ಯ ಸ್ಥಿರವಾಗಿದೆ.

ADVERTISEMENT

ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು ಚಿನ್ನೇನಹಳ್ಳಿಯ ಪ್ರತಿ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಜೂನ್‌ 10ರಿಂದ ಈ ಕೆಲಸ ನಿರಂತರವಾಗಿ ನಡೆಯುತ್ತಿದೆ. ವಾಂತಿ–ಭೇದಿ, ಇತರೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕೂಡಲೇ ತಾತ್ಕಾಲಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ.

ಈಗಾಗಲೇ ಚಿನ್ನೇನಹಳ್ಳಿಯ ಕೊಳವೆ ಬಾವಿಯಿಂದ ನೀರು ಪೂರೈಸುವುದನ್ನು ತಡೆಯಲಾಗಿದೆ. ಬಳಕೆ, ಕುಡಿಯಲು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದರ ನಂತರವೂ ವಾಂತಿ–ಭೇದಿ ಪ್ರಕರಣಗಳು ನಿಯಂತ್ರಣಕ್ಕೆ ಬಂದಿರಲಿಲ್ಲ. ಕಳೆದ ಎರಡು ದಿನಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿದೆ.

‘ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿದ್ದಾರೆ. ವಾಂತಿ–ಭೇದಿಯಾದ ತಕ್ಷಣಕ್ಕೆ ಚಿನ್ನೇನಹಳ್ಳಿ ತಾತ್ಕಾಲಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ನಂತರ ಮಧುಗಿರಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಕೊನೆಗೆ ಖಾಸಗಿ ಆಸ್ಪತ್ರೆಗೆ ಹೋಗಬೇಕಾಗಿದೆ. ಸರ್ಕಾರಿ ಆಸ್ಪತ್ರೆಗಳು ಅಂಚೆ ಕಚೇರಿಯಂತಾಗಿವೆ. ಇಲ್ಲಿನ ವೈದ್ಯರು ಬಂದ ರೋಗಿಗಳನ್ನು ಮುಂದಿನ ಆಸ್ಪತ್ರೆಗೆ ಸಾಗ ಹಾಕುತ್ತಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ’ ಎಂದು ಚಿನ್ನೇನಹಳ್ಳಿ ಗ್ರಾಮಸ್ಥರು ದೂರಿದರು.

‘ಜಿಲ್ಲಾ ಆಡಳಿತ, ಇಬ್ಬರು ಸಚಿವರು ಕಲುಷಿತ ನೀರಿನ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಗ್ರಾಮಕ್ಕೆ ಭೇಟಿ ನೀಡಿ ಸೂಚನೆ ನೀಡಿದ ನಂತರವೂ ಇಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿಲ್ಲ. ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭೇಟಿಯೂ ನಾಮಕಾವಸ್ತೆಯಾಗಿದೆ. ಕೊಳವೆ ಬಾವಿಯಿಂದ ನೀರು ಕೊಡುವುದನ್ನು ನಿಲ್ಲಿಸಿರುವುದು ಬಿಟ್ಟರೆ ಬೇರೆ ಯಾವುದೇ ಬದಲಾವಣೆ, ಬೆಳವಣಿಗೆಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿನ್ನೇನಹಳ್ಳಿಯ ಮೂವರ ಸ್ಥಿತಿ ಗಂಭೀರ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ 14 ಜನ ಜನರಲ್‌ ವಾರ್ಡ್‌ಗೆ ದಾಖಲು

ಅಗತ್ಯ ಕ್ರಮ ಚಿನ್ನೇನಹಳ್ಳಿ ಗ್ರಾಮದಲ್ಲಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ನೀಡಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ವೈದ್ಯರು ಸಿಬ್ಬಂದಿ ನಿಯೋಜಿಸಲಾಗಿದೆ. ಕಾಲರಾ ದೃಢಪಟ್ಟ ವ್ಯಕ್ತಿ ಗ್ರಾಮದಿಂದ ಹೊರಗಿದ್ದು ಹೆಚ್ಚಿನ ಸಮಸ್ಯೆಯಾಗುವುದಿಲ್ಲ. ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳದಲ್ಲೇ ಇದ್ದು ಜನರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಡಾ.ಡಿ.ಎನ್‌.ಮಂಜುನಾಥ್‌ ಡಿಎಚ್‌ಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.