ಗುಬ್ಬಿ: ಅಧಿಕಾರಿಗಳು ಮಾಡುವ ಬೇಜವಾಬ್ದಾರಿತನಕ್ಕೆ ಜನರು ಶಾಸಕರನ್ನು ನಿಂದಿಸುತ್ತಾರೆ. ಆದ್ದರಿಂದ ಅಧಿಕಾರಿಗಳು ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಸೂಚಿಸಿದರು.
ಪಟ್ಟಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಶಾಲೆಗಳು ಪ್ರಾರಂಭಗೊಂಡಿರುವುದರಿಂದ ಅಗತ್ಯವಿರುವ ಶಾಲಾ ಕಟ್ಟಡ ದುರಸ್ತಿಗೊಳಿಸುವ ಜೊತೆಗೆ ಶಿಕ್ಷಕರ ಕೊರತೆ ನೀಗಿಸಲು ಕ್ರಮವಹಿಸಬೇಕು ಎಂದರು.
ಸರ್ಕಾರಿ ವೈದ್ಯರು ಬೇಕಾಬಿಟ್ಟಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿಗೆ ಸೂಚಿಸಿದರು.
ರಸ್ತೆ ಕಾಮಗಾರಿ ಮಾಡುವಾಗ ಸಂಬಂಧಿಸಿದ ಎಂಜಿನಿಯರ್‌ಗಳು ಗುಣಮಟ್ಟ ಪರೀಕ್ಷೆ ಮಾಡಬೇಕು. ರಸ್ತೆ ಹಾಳಾದರೆ ಶಾಸಕರನ್ನೇ ದೋಷಿಸುವುದರಿಂದ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಮೀಸಲು ಮತ್ತು ಡೀಮ್ಡ್ ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದರೂ ದಾಖಲೆ ಸರಿಪಡಿಸಿಕೊಳ್ಳದ ಕಾರಣ ಸರ್ಕಾರಿ ಜಮೀನು ಎಂದು ತಿಳಿದು ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳ ತಪ್ಪಿಗೆ ಜನಪ್ರತಿನಿಧಿಗಳು ತಲೆ ತಗ್ಗಿಸುವಂತಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ಸಾಕಷ್ಟು ದೂರು ಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಹಳೆಯ ಪೈಪ್‌ಲೈನ್‌ಗೆ ಜೆಜೆಎಂ ಪೈಪ್‌ಲೈನ್‌ನನ್ನು ಜೋಡಿಸುವ ಮೂಲಕ ಅಕ್ರಮ ಎಸಗಿರುವುದು ಗೊತ್ತಾಗಿದೆ. ತನಿಖೆ ನಡೆಸಿ ಸಂಬಂಧಿಸಿದವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ತೋಟಗಾರಿಕೆ ಹಾಗೂ ಕೃಷಿ ಇಲಾಖೆಯಲ್ಲಿ ಬರುವ ಅನುದಾನವನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸಬೇಕಿದೆ. ಮಧ್ಯವರ್ತಿಗಳ ಮೂಲಕ ಅಧಿಕಾರಿಗಳು ಅಕ್ರಮ ಎಸಗಿದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಬಿ.ಆರತಿ, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ ಕುಮಾರ್, ಸಿಪಿಐ ಗೋಪಿನಾಥ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.