ಪ್ರಜಾವಾಣಿ ವಾರ್ತೆ
ತುಮಕೂರು: ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ ಕಡಿಮೆಯಾಗಿದೆ. ಬಡತನ ಪ್ರಮಾಣವೂ ಇಳಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.
ನಗರದ ಹೊರವಲಯದ ಹೆಗ್ಗೆರೆಯಲ್ಲಿ ಗುರುವಾರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆಯಲ್ಲಿ ಮನೆ ಕಲ್ಪಿಸುವ ಅಧಿಕಾರವನ್ನು ಶಾಸಕರಿಂದ ಗ್ರಾ.ಪಂ ಅಧ್ಯಕ್ಷರಿಗೆ ನೀಡಲಾಯಿತು. ಇದಕ್ಕೆ ಶಾಸಕರಿಂದ ವಿರೋಧ ವ್ಯಕ್ತವಾದರೂ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬೇಲೂರು ಘೋಷಣೆಗೆ ಬದ್ಧತೆ ತೋರಿದರು. ಹಾಗಾಗಿ ವಸತಿ, ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಇತರೆ ಕೆಲಸ ನಿರ್ವಹಿಸುವಲ್ಲಿ ಹೆಚ್ಚಿನ ಜವಾಬ್ದಾರಿ ತೋರಿಸಬೇಕು. ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಕೊಠಡಿ, ಶೌಚಾಲಯ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಬಹುತೇಕ ಶಾಲೆಗಳಿಗೆ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆ, ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಡೆಂಗಿ ಜ್ವರ ಹೆಚ್ಚಾಗುತ್ತಿದ್ದು, ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ನಿಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ₹2,600 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಜಲ್ ಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಮನೆಗಳಿಗೆ ಕುಡಿಯುವ ನೀರು ಒದಗಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ನಿರ್ದೇಶಿಸಿದರು.
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರಿಗೆ ಸರ್ಕಾರಿ ಆದೇಶಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಜನರೊಂದಿಗೆ ಸಮನ್ವಯ ಸಾಧಿಸಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ತಿಳಿಸಿದರು.
ಶಾಸಕ ಬಿ.ಸುರೇಶ್‌ಗೌಡ, ‘ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಯೋಜನೆಗಳ ಅನುಷ್ಠಾನ ಪಾರದರ್ಶಕವಾಗಿ, ತ್ವರಿತಗತಿಯಲ್ಲಿ ಮಾಡಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜನಪ್ರತಿನಿಧಿಗಳು, ಗ್ರಾಮಸ್ಥರ ನಡುವಿನ ಕೊಂಡಿಯಾಗಿ ಸೃಜನಶೀಲತೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.
ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ‘ಗ್ರಾಮ ಪಂಚಾಯಿತಿಗಳು ಕೇವಲ ಗ್ರಾಮ ನೈರ್ಮಲ್ಯ, ಬೀದಿ ದೀಪ, ನೀರು ಪೂರೈಕೆಗಷ್ಟೇ ಸೀಮಿತವಾಗದೆ, ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಗ್ರಾ.ಪಂ ಸದಸ್ಯರು, ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಅಭಿವೃದ್ಧಿಗೆ ಬಳಸಬೇಕೇ ಹೊರತು ಅಧಿಕಾರ ಚಲಾಯಿಸಲು ಬಳಸಬಾರದು’ ಎಂದು ಎಚ್ಚರಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ‘ಜಿಲ್ಲೆಯಲ್ಲಿ ಕಳೆದ ವರ್ಷ ನರೇಗಾ ಯೋಜನೆಯಡಿ ಶಾಲೆ, ಶೌಚಾಲಯ, ಗ್ರಾ.ಪಂ, ಅಂಗನವಾಡಿ ಕಟ್ಟಡ, ಚರಂಡಿ, ಸಂಜೀವಿನಿ ಭವನ ನಿರ್ಮಾಣ ಕಾಮಗಾರಿಗಳಿಗೆ ₹630 ಕೋಟಿ ಅನುದಾನ ಬಳಕೆ ಮಾಡಲಾಗಿದೆ. ಗುರಿ ಮೀರಿದ ಸಾಧನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ ₹706 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಈಗಾಗಲೇ ₹440 ಕೋಟಿ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹಾದೇವನ್, ಶಾಸಕ ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇತರರು ಉಪಸ್ಥಿತರಿದ್ದರು.
ದಾನ ಕಾಯುವ ಅಜ್ಜಿಗೆ ಅಧಿಕಾರ
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ಫಲವಾಗಿ ದನ ಕಾಯುತ್ತಿದ್ದ ಮಧುಗಿರಿ ತಾಲ್ಲೂಕಿನ ಸಿದ್ಧಾಪುರದ ಸಿದ್ಧಗಂಗಮ್ಮ ಎಂಬ ಅಜ್ಜಿ ಗ್ರಾ.ಪಂ ಅಧ್ಯಕ್ಷರಾದರು ಎಂದು ಪರಮೇಶ್ವರ ನೆನಪಿಸಿಕೊಂಡರು. ಎಮ್ಮೆ ಕಾಯುತ್ತಿದ್ದ ಅಜ್ಜಿಯ ಮನೆಯ ಮುಂದೆ ನಿಂತು ಮನೆಗಾಗಿ ಜನರು ಅರ್ಜಿ ಸಲ್ಲಿಸುವಂತಾಯಿತು. ಇದು ಒಂದು ಗ್ರಾಮದ ಉದಾಹರಣೆ. ಮಹಿಳಾ ಮೀಸಲಾತಿಯಿಂದ ಇಂತಹ ಲಕ್ಷಾಂತರ ಮಹಿಳೆಯರು ರಾಜ್ಯದಲ್ಲಿ ಅಧಿಕಾರ ಚಲಾಯಿಸುವಂತಾಯಿತು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.