ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಲ್ಲಿ ಹಲವು ಪ್ರವಾಸಿ ತಾಣಗಳಿದ್ದು ಅವುಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಸಸ್ಯಕಾಶಿ ಮದಲಿಂಗನ ಕಣಿವೆಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆಯ ಸಹಯೋಗದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮಾಸ್ತಿ, ತೀನಂಶ್ರೀ ಮುಂತಾದ ಕವಿಗಳು ಸಾಹಿತ್ಯದಲ್ಲಿ ಮದಲಿಂಗನ ಕಣಿವೆಯನ್ನು ಚಿತ್ರಿಸಿದ್ದಾರೆ. ಇತಿಹಾಸ ಸಾರುವ ಇಂತಹ ಜೀವ ಹಾಗೂ ಸಸ್ಯಕಾಶಿ ಮುಂದಿನ ಯುವಪೀಳಿಗೆಗೆ ಉಳಿಯಬೇಕು. ಅಲ್ಲದೆ ಇಂದಿನ ಯುವಕರು ಸಹ ಪ್ರವಾಸಿ ತಾಣಗಳನ್ನು ಉಳಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಪ್ರವಾಸಿ ತಾಣಗಳ ಅಭಿವೃದ್ಧಿಯಾದರೆ ಅಲ್ಲಿನ ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೆಟ್ಟಗಳನ್ನು ಹೊರಜಗತ್ತಿಗೆ ತೋರಿಸುವ ಕಾರ್ಯ ಮಾಡುತ್ತಿದೆ ಎಂದರು.
ಜಿ.ಪಂ. ಸಿಇಒ ಡಾ.ವಿದ್ಯಾಕುಮಾರಿ ಮಾತನಾಡಿ, ಮದಲಿಂಗನ ಕಣಿವೆಯಂತಹ ಅನೇಕ ಪ್ರದೇಶಗಳು ಬೆಳಕಿಗೆ ಬಂದಿಲ್ಲ. ಅಂತಹ ಸ್ಥಳಗಳನ್ನು ಗುರುತಿಸಿ ಮುಂದಿನ ಯುವಪೀಳಿಗೆಗೆ ನಮ್ಮ ನೆಲದ ಇತಿಹಾಸ ತಿಳಿಸುವ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ನವೋದಯ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮದಲಿಂಗನ ಕಣಿವೆಗೆ ಚಾರಣ ಹಮ್ಮಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.